ಬೆಂಗಳೂರು: ವಿಧಾನಸೌಧದಲ್ಲಿ ಸೋಮವಾರ(ಅಕ್ಟೋಬರ್ 28) ಮಹತ್ವದ ಸಚಿವ ಸಂಪುಟ ಸಭೆ(Cabinet Meeting) ನಡೆಯಿತು. ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಹಾಗೂ ಜಾತಿ ಗಣತಿ ವರದಿ ಬಿಡುಗಡೆ ಸೇರಿದಂತೆ ಹಲವು ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸಲು ನಿರ್ಣಯಿಸಲಾಗಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ನೇಮಿಸಿ ದತ್ತಾಂಶವನ್ನು ಪಡೆದ ಬಳಿಕ ಮುಂದಿನ ಹೆಜ್ಜೆ ಇಡುವುದಾಗಿ ತಿಳಿಸಲಾಯಿತು. ಅಲ್ಲದೇ ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡುವಂತೆ ಆಯೋಗಕ್ಕೆ ಸೂಚನೆ ನೀಡಲಾಯಿತು.
ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡಲು ಸುಪ್ರಿಂಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, ಒಳ ಮೀಸಲಾತಿ ಕಲ್ಪಿಸಲು ಕ್ಯಾಬಿನೆಟ್ ನಿರ್ಣಯ ಮಾಡಿದೆ. ಆಯೋಗದಿಂದ ದತ್ತಾಂಶ ಪಡೆದು ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಸದ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ಕಾನೂನು ಸಚಿವ ಹೆಚ್.ಕೆ. ಪಾಟೀಲ್, ಸಚಿವರಾದ ಪ್ರಿಯಾಂಕ್ ಖರ್ಗೆ, ಹೆಚ್.ಸಿ. ಮಹದೇವಪ್ಪ, ಕೆ.ಹೆಚ್. ಮುನಿಯಪ್ಪ, ಆರ್ ಬಿ ತಿಮ್ಮಾಪುರ, ಶಿವರಾಜ್ ತಂಗಡಗಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಒಳಮೀಸಲಾತಿಗೆ ಯಾರದ್ದೂ ವಿರೋಧ ಇಲ್ಲ. ರಚನೆಯಾಗುವ ಏಕಸದಸ್ಯ ಆಯೋಗ ಯಾವ ರೀತಿ ಮುಂದುವರಿಯಬೇಕೆಂದು ಶಿಫಾರಸು ಮಾಡಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಒಳ ಮೀಸಲು ಮಾಡಿಯೇ ಮಾಡುತ್ತೇವೆಂದು ಸಿಎಂ ಭರವಸೆ ನೀಡಿದ್ದಾರೆ. ಮೂವತ್ತು ವರ್ಷ ಕಾದಿದ್ದು ಇನ್ನು ಮೂರು ತಿಂಗಳು ಕಾಯೋಣ ಎಂದು ಸಂಘ ಸಂಸ್ಥೆಗಳಿಗೆ ಕೋರುತ್ತೇವೆ ಎಂದು ಕೆ.ಎಚ್.ಮುನಿಯಪ್ಪ ಹೇಳಿದರು. ಸುಪ್ರಿಂಕೋರ್ಟ್ ಆದೇಶದ ಪ್ರಕಾರ ಒಳಮೀಸಲಾತಿ ಜಾರಿ ಮಾಡಲು ಯಾವ ದಾಖಲೆ ಪರಿಗಣಿಸಬೇಕೆಂದು ಆಯೋಗವು ನಿರ್ಧರಿಸಲಿದೆ ಎಂದು ಮಹದೇವಪ್ಪ ತಿಳಿಸಿದರು.
ಮೂರು ದಶಕಗಳಿಂದ ನಡೆಯುತ್ತಿರುವ ಹೋರಾಟ
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡುವ ಮೂಲಕ ಅಸ್ಪೃಶ್ಯ ಜಾತಿಗಳಿಗೆ ಸೇರಿದವರಿಗೆ ನ್ಯಾಯ ಒದಗಿಸಬೇಕೆಂದು ಮೂರು ದಶಕಗಳಿಂದ ಹೋರಾಟ ನಡೆಯುತ್ತಲೇ ಇತ್ತು. ಎಸ್‌ಎಂ ಕೃಷ್ಣ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಒಳಮೀಸಲಾತಿ ಬಗ್ಗೆ ಬೇಡಿಕೆ ತೀವ್ರಗೊಂಡಿತ್ತು. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಆಯೋಗ ರಚಿಸುವ ಪ್ರಸ್ತಾವ ಸರ್ಕಾರದ ಮುಂದೆ ಇತ್ತು. ಬಳಿಕ ಅಸ್ತಿತ್ವಕ್ಕೆ ಬಂದ ಧರ್ಮಸಿಂಗ್ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ (2005)ಅಧ್ಯಯನ ನಡೆಸಿ ಶಿಫಾರಸು ಮಾಡಲು ಎ.ಜಿ ಸದಾಶಿವ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಗಿತ್ತು. ಆಗ ಪರಿಶಿಷ್ಟ ಜಾತಿಗಳಿಗೆ ಇದ್ದ ಶೇ.15ರ ಮೀಸಲಾತಿಯನ್ನು ಎಡಗೈಗೆ ಶೇ.6, ಬಲಗೈಗೆ ಶೇ.5.5, ಅಸ್ಪೃಶ್ಯ ಉಪಜಾತಿಗಳಿಗೆ ಶೇ.3 ಹಾಗೂ ಈ ಮೂರು ಗುಂಪುಗಳಿಗೆ ಸೇರದ ಜಾತಿಗಳವರಿಗೆ ಶೇ.1 ರಷ್ಟು ಮೀಸಲಾತಿ ನೀಡಬಹುದು ಎಂದು ಸದಾಶಿವ ಆಯೋಗವು 2012ರಲ್ಲೇ ಅಂದಿನ ಮುಖ್ಯಂತ್ರಿ ಡಿವಿ ಸದಾನಂದಗೌಡ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ವರದಿ ಸಲ್ಲಿಸಿ ಶಿಫಾರಸು ಮಾಡಿತ್ತು.
Post a Comment