ಬೆಂ ಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನಾಲ್ಕು ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು.
ಅದರಂತೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಸಿಬಿಐ ತನಿಖೆ ಆದೇಶ ವಾಪಸ್ ಪಡೆಯುವ ನಿರ್ಧಾರ ಕೈಗೊಳ್ಳಲಾಯಿತು. ಆ ಬಗ್ಗೆ ಸಚಿವ ಸಂಪುಟ ನಿರ್ಣಯ ಕೈಗೊಂಡಿತು.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಧರಿಸಲಿ. ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅರ್ಜಿ ವಜಾಗೊಳಿಸಿತ್ತು.
ಏತನ್ಮಧ್ಯೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಆಗಸ್ಟ್ 29 ರಂದು ಹೈಕೋರ್ಟ್ ತಿರಸ್ಕರಿಸಿತ್ತು. ಅಲ್ಲದೆ, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂಕೋರ್ಟ್ ತೀರ್ಮಾನಿಸಲಿ ಎಂದು ಅಭಿಪ್ರಾಯಪಟ್ಟಿತ್ತು.
Post a Comment