ಶಕ್ತಿ ಯೋಜನೆಯಡಿ ಗಂಡಸರಿಗೂ ಉಚಿತ ಪ್ರಯಾಣ: ಡಿಕೆಶಿ ಸುಳಿವು



 ಬೆಂಗಳೂರು (ನ.15): ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

ದೇಶದ ಪ್ರಥಮ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ನಗರ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳೊಂ ದಿಗಿನ ಸಂವಾದದಲ್ಲಿ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಉಪಮುಖ್ಯಮಂತ್ರಿಗಳು ಈ ಭರವಸೆ ನೀಡಿದರು.

ನೀಲಸಂದ್ರದ ಬಿಬಿಎಂಪಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಚರಣ್, 'ನಿಮ್ಮ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೀರಿ. ಅದರಲ್ಲಿ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರು ಉಚಿತ ಸಂಚಾರಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದ್ದೀರಿ. ಇದರಿಂದ ನಮ್ಮ ಅಮ್ಮ, ಅಕ್ಕ, ತಂಗಿಯರು, ಸ್ನೇಹಿತೆ ಯರಿಗೆ ಅನುಕೂಲ ಆಗುತ್ತಿದೆ. ಗಂಡು ಮಕ್ಕಳಿಗಾಗಿ ಯಾವುದೇ ಯೋಜನೆ ಇಲ್ಲವೇ?' ಎಂದು ಕೇಳಿದರು.

ಇದಕ್ಕೆ ಉತ್ತರಿಸಿದ ಡಿ.ಕೆ.ಶಿವಕುಮಾರ್ ಅವರು, 'ನಿಮ್ಮ ತಾಯಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ ₹2000, ಅನ್ನಭಾಗ್ಯದಡಿ 10 ಕೇಜಿ ಅಕ್ಕಿ, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್, ಎಲ್ಲ ಹೆಣ್ಣು ಮಕ್ಕಳಿಗೂ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗುತ್ತಿದೆ. ಈಗ ನೀನು ಕೇಳಿರುವ ಪ್ರಶ್ನೆಗೆ, ಶಕ್ತಿ ಯೋಜನೆಯಡಿ ಒಂದು ವಯೋಮಾನದವರೆಗಿನ ಗಂಡು ಮಕ್ಕಳಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಯೋಚಿಸಿ ಮುಂದೆ ಕ್ರಮ ವಹಿಸಲಾಗುವುದು'ಎಂದರು. ಸಚಿವ ಮಧು ಬಂಗಾರಪ್ಪ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ಗಿರಿನಾಥ್, ವಿಶೇಷ ಆಯುಕ್ತರಾದ ಪ್ರೀತಿ ಗೆಹೋಟ್ ಉಪಸ್ಥಿತರಿದ್ದರು.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget