ಕೆಂಗೇರಿ, ಬಿಡದಿ, ರಾಮನಗರ ಮತ್ತು ಚನ್ನಪಟ್ಟಣದ ಒಂದೊಂದು ಕಡೆ ಐದೈದು ನಿಮಿಷ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ನಾಳೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಥಳಕ್ಕೆ ತೆರಳಿ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಬೆಳಗ್ಗೆ 8 ಗಂಟೆಯವರೆಗೆ ಸದಾಶಿವನಗರದಲ್ಲಿರುವ ಕೃಷ್ಣ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. 8 ಗಂಟೆಗೆ ಮೃತದೇಹವನ್ನು ವಾಹನದ ಮೂಲಕ ಸೋಮನಹಳ್ಳಿಗೆ ತರಲಾಗುತ್ತದೆ. ಮಾರ್ಗಮಧ್ಯೆ ಕೆಂಗೇರಿ, ಬಿಡದಿ, ರಾಮನಗರ ಮತ್ತು ಚನ್ನಪಟ್ಟಣದ ಒಂದೊಂದು ಕಡೆ ಐದೈದು ನಿಮಿಷ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಸಾರ್ವಜನಿಕರು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನ ಪಡೆಯಬಹುದು" ಎಂದರು.
"ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಸಿಎಂ ಸಿದ್ದರಾಮಯ್ಯ, ಎಲ್ಲ ಸಚಿವರು ಮತ್ತು ಪಕ್ಷದ ಎಲ್ಲಾ ಶಾಸಕರು ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ನಾಯಕರು ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾಳೆ ರಾಜ್ಯಾದ್ಯಂತ ರಜೆ ಘೋಷಿಸಲಾಗಿದೆ. ಸದನದಲ್ಲೂ ಸಂತಾಪ ಸೂಚಿಸಲಾಗಿದೆ. 3 ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ" ಎಂದು ತಿಳಿಸಿದರು.
Post a Comment