ಮುಂಬೈ: 'ಮುಖ್ಯಮಂತ್ರಿ ಹುದ್ದೆ ಬಗ್ಗೆ ಬಿಜೆಪಿ ನಿರ್ಧಾರ ತೆಗೆದುಕೊಳ್ಳಲಿದ್ದು, ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಮಹಾಯುತಿ ಮೈತ್ರಿಕೂಟದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ' ಎಂದು ಶಿವಸೇನಾ(ಶಿಂದೆ ಬಣ) ಮುಖ್ಯಸ್ಥ, ಮಹಾರಾಷ್ಟ್ರ ನಿರ್ಗಮಿತ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದರು.ತಮ್ಮ ಸ್ವಗ್ರಾಮ ಡಾರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನೂತನ ಸರ್ಕಾರ ರಚನೆಯ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಮಹಾಯುತಿ ಮೈತ್ರಿಕೂಟದ ಮಿತ್ರಪಕ್ಷಗಳಾದ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ಒಮ್ಮತದ ಮೂಲಕ ಎಲ್ಲಾ ನಿರ್ಧಾರ ತೆಗೆದುಕೊಳ್ಳುತ್ತವೆ' ಎಂದರು.
ಅಸಮಾಧಾನಗೊಂಡು ಸ್ವಗ್ರಾಮಕ್ಕೆ ತೆರಳಿದ್ದಾರೆ ಎಂಬ ವದಂತಿಗಳಿಗೆ ಪ್ರತಿಕ್ರಿಯಿಸಿದ ಅವರು, 'ನನ್ನ ಗ್ರಾಮಕ್ಕೆ ನಾನು ನಿಯಮಿತವಾಗಿ ಭೇಟಿ ನೀಡುತ್ತಿರುತ್ತೇನೆ. ಮುಖ್ಯಮಂತ್ರಿ ಹುದ್ದೆ ಬಗ್ಗೆ ಕಳೆದ ವಾರವೇ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದರೂ ಈ ಗೊಂದಲವೇಕೆ? ಮುಖ್ಯಮಂತ್ರಿ ಹುದ್ದೆ ಬಗ್ಗೆ ಬಿಜೆಪಿ ನಿರ್ಧಾರ ತೆಗೆದುಕೊಳ್ಳುತ್ತದೆ. ಅದಕ್ಕೆ ನಾನು ಮತ್ತು ನಮ್ಮ ಪಕ್ಷ ಶಿವಸೇನೆ ಬದ್ಧವಾಗಿದ್ದೇವೆ' ಎಂದರು.
'ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಇನ್ನೂ ಘೋಷಿಸಿಲ್ಲ. ನಾವು ಜನರ ಆಶೋತ್ತರಗಳನ್ನು ಈಡೇರಿಸುತ್ತೇವೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಾವು ಜನರ ಹಿತಾಸಕ್ತಿಯನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ನನ್ನ ನಿಲುವನ್ನು ಪುನರಾವರ್ತಿಸುವ ಅಗತ್ಯವಿಲ್ಲ' ಎಂದು ಹೇಳಿದರು.
ಶುಕ್ರವಾರ(ನವೆಂಬರ್ 29) ಸ್ವಗ್ರಾಮಕ್ಕೆ ತೆರೆಳಿದ್ದ ಏಕನಾಥ ಶಿಂದೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಇಂದು ಅವರು ಮುಂಬೈಗೆ ಮರಳಿದ್ದಾರೆ ಎಂದು ಶಿವಸೇನೆ ಮೂಲಗಳು ತಿಳಿಸಿವೆ.
ಡಿಸೆಂಬರ್ 5ರ ಸಂಜೆ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ಬಿಜೆಪಿ ಈಗಾಗಲೇ ಘೋಷಿಸಿದೆ. ಅದಾಗ್ಯೂ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುವುದನ್ನು ಮಹಾಯುತಿ ಮೈತ್ರಿಕೂಟ ಘೋಷಣೆ ಮಾಡಿಲ್ಲ.
Post a Comment