ರಾಜ್ಯದಲ್ಲಿ ಹೆಚ್ಚಿದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ: ಜ.25ಕ್ಕೆ ಸಿಎಂ ನೇತೃತ್ವದಲ್ಲಿ ಸಭೆ

 ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ಹೆಚ್ಚಾಗುತ್ತಿರುವ ಬಗ್ಗೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರಮುಖ ಸಚಿವರ ಸಭೆ ಕರೆದಿದ್ದಾರೆ.



ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ.


ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಉಪಟಳ ಸಂಬಂಧ ಚರ್ಚೆ ನಡೆಸಲು ಗೃಹ ಕಚೇರಿ ಕೃಷ್ಣಾದಲ್ಲಿ ಜ.25ಕ್ಕೆ ಸಭೆ ಕರೆದಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ವಿರುದ್ಧ ರೈತರು ಸೇರಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ ಈ ಸಂಬಂಧ ಚರ್ಚಿಸಲು ಸಭೆ ಕರೆದಿದ್ದಾರೆ.


ಸಭೆಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಕರೆಯಲಾಗಿದೆ. ಉಳಿದಂತೆ ಮುಖ್ಯ ಕಾರ್ಯದರ್ಶಿ, ಅಡ್ವೊಕೇಟ್ ಜನರಲ್, ಪೊಲೀಸ್ ಮಹಾನಿರ್ದೇಶಕರು, ಆರ್ಥಿಕ ಇಲಾಖೆ, ಸಹಕಾರ ಇಲಾಖೆ, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸೇರಿ ವಿವಿಧ ಅಧಿಕಾರಿಗಳನ್ನು ಸಭೆಗೆ ಕರೆಯಲಾಗಿದೆ.‌ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ವಿರುದ್ಧ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು.

ಈಗಾಗಲೇ ನೊಂದ ಮಹಿಳೆಯರು ಮಾಂಗಲ್ಯ ಉಳಿಸಿ ಎಂಬ ಅಭಿಯಾನ ನಡೆಸುತ್ತಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ತಪ್ಪಿಸಿ ಮಾಂಗಲ್ಯ ಉಳಿಸಿ ಎಂದು ಆಗ್ರಹಿಸಿ ನೊಂದ ಮಹಿಳೆಯರು ಮಾಂಗಲ್ಯ ಸಮೇತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಂಚೆ ಮೂಲಕ ಪತ್ರ ರವಾನಿಸಿದ್ದಾರೆ‌. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನೇಕ ಕಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕಿರುಕುಳ ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ.‌


ಹಾವೇರಿ, ಮೈಸೂರು, ಉಡುಪಿ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ ಸಾಕಷ್ಟು ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚುತ್ತಿದೆ. ಉಪಟಳ ತಾಳಲಾರದೇ ಜನರು ಮನೆ, ಊರು ಬಿಟ್ಟು ಹೋಗುತ್ತಿದ್ದಾರೆ‌. ಬೆಳಗಾವಿ ತಾಲೂಕಿನ ಶಿರೂರಿನಲ್ಲಿ ಫೈನಾನ್ಸ್ ಕಿರುಕುಳ ಆರೋಪಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget