ರೇಣುಕಾಸ್ವಾಮಿ ಹತ್ಯೆ: ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದುಗೊಳಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್

 ನಟ ದರ್ಶನ್ ಸೇರಿ 7 ಮಂದಿಯ ಜಾಮೀನು ರದ್ದು ಕೋರಿ ಸುಪ್ರೀಂಗೆ 1,492 ಪುಟಗಳ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿತ್ತು. ಇಂದು ವಿಚಾರಣೆ ನಡೆದಿದ್ದು, ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.



ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಮತ್ತು ಇತರ ಐವರು ಪಡೆದಿರುವ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅದಾಗ್ಯೂ, ಅವರ ಜಾಮೀನನ್ನು ಪ್ರಶ್ನಿಸುವ ರಾಜ್ಯ ಸರ್ಕಾರದ ಮೇಲ್ಮನವಿ ಪರಿಶೀಲಿಸಲು ನ್ಯಾಯಾಲಯ ಒಪ್ಪಿಕೊಂಡಿದೆ.


ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ರಾಜ್ಯ ಸರ್ಕಾರ: ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಮತ್ತು ಆರ್.ಮಹಾದೇವನ್ ಅವರಿದ್ದ ಪೀಠದೆದುರು ಇಂದು ಈ ಪ್ರಕರಣ ಪ್ರಸ್ತಾಪವಾಯಿತು. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.


ಜಾಮೀನು ರದ್ದು ಕೋರಿ ಮೇಲ್ಮನವಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾಗಿರುವ ದರ್ಶನ್, ಪವಿತ್ರಾ ಗೌಡ, ನಾಗರಾಜು, ಅನುಕುಮಾರ್, ಲಕ್ಷ್ಮಣ್, ಜಗದೀಶ್ ಹಾಗೂ ಪ್ರದೂಷ್​​​ಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಮೇಲ್ಮನವಿ ಇತ್ತೀಚೆಗಷ್ಟೇ ಸಲ್ಲಿಕೆಯಾಗಿತ್ತು.

ನೋಟಿಸ್ ಜಾರಿ: ಸುಪ್ರೀಂ ಕೋರ್ಟ್ ನಟ ದರ್ಶನ್ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದೆ.


ಪ್ರಕರಣ: ಆಟೋರಿಕ್ಷಾ ಚಾಲಕರಾಗಿದ್ದ 33ರ ರೇಣುಕಾಸ್ವಾಮಿ ಅವರ ಮೃತದೇಹ ಕಳೆದ ವರ್ಷ ಜೂನ್ 9ರಂದು ಪತ್ತೆಯಾಗಿತ್ತು. ನಂತರ ದೂರು ದಾಖಲಾಗಿ ಹೆಚ್ಚಿನ ತನಿಖೆ ಮುಂದುವರಿಯಿತು. ಈ ಪ್ರಕರಣದಲ್ಲಿ ಭಾಗಿಯಾಗಿರೋ ಆರೋಪ ಹೊತ್ತಿರುವ 17 ಮಂದಿ ಆರೋಪಿಗಳಿಗೂ ಜಾಮೀನು ಸಿಕ್ಕಿತ್ತು. ಆದರೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎನ್ನಲಾದ 7 ಆರೋಪಿಗಳ ಜಾಮೀನು ರದ್ದು ಕೋರಿ 1,492 ಪುಟಗಳ ಕಡತವನ್ನ ಸುಪ್ರೀಂ ಕೋರ್ಟ್​​ಗೆ ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಸಲ್ಲಿಸಿತ್ತು.

"ಕರ್ನಾಟಕ ರಾಜ್ಯ ಸರ್ಕಾರ ಆರೋಪಿಗಳ ಜಾಮೀನು ರದ್ದಿಗೆ ಕೋರಿದ್ದು, ಆದೇಶದ ಕಾರ್ಯಾಚರಣೆಯನ್ನು ತಡೆಹಿಡಿಯುವುದು ಸೂಕ್ತವಲ್ಲ. ಏಕೆಂದರೆ, ಅದು ಜಾಮೀನು ರದ್ದಿಗೆ ಸಮಾನವಾಗುತ್ತದೆ" ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಸಲ್ಲಿಕೆಯಾಗೋ ಯಾವುದೇ ಜಾಮೀನು ಅರ್ಜಿಯನ್ನು ಅದರ ಅರ್ಹತೆಯ ಮೇಲೆ ನಿರ್ಧರಿಸಲಾಗುತ್ತದೆ ಎಂದು ಸಹ ಸುಪ್ರೀಂ ಕೋರ್ಟ್ ತಿಳಿಸಿದೆ. ಕಳೆದ ವರ್ಷ ಡಿಸೆಂಬರ್ 13ರಂದು, ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ನೀಡಿತ್ತು.

2024ರ ಜೂನ್​​ 8ರಂದು ರೇಣುಕಾಸ್ವಾಮಿ ಕೊಲೆ ನಡೆದಿತ್ತು. ಜೂನ್ 11ರಂದು ಈ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ದರ್ಶನ್ ಅವರನ್ನು ಬಂಧಿಸಲಾಯಿತು. ನಟನ ಗೆಳತಿ ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೊದಲು, ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು. ಆದರೆ ಅವರು ಇತರ ಕೈದಿಗಳೊಂದಿಗೆ ಆರಾಮಾಗಿ ವಿಶ್ರಾಂತಿ ಪಡೆಯುತ್ತಿದ್ದ ಫೋಟೋ ವೈರಲ್ ಆದ ನಂತರ, ನಟನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು. ವೈದ್ಯಕೀಯ ಕಾರಣಗಳನ್ನು ಆಧರಿಸಿ ಅಕ್ಟೋಬರ್ 30, 2024ರಂದು ದರ್ಶನ್ ಅವರಿಗೆ 6 ವಾರಗಳ ಮಧ್ಯಂತರ ಜಾಮೀನು ನೀಡಲಾಯಿತು. ನಂತರ, ಡಿಸೆಂಬರ್‌ನಲ್ಲಿ ಹೈಕೋರ್ಟ್ ನಟ ಸೇರಿ ಇತರ ಆರೋಪಿಗಳಿಗೆ ರೆಗ್ಯುಲರ್ ಬೇಲ್​ ಮಂಜೂರು ಮಾಡಿತು.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget