ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ : ಸಂಸದ ಕ್ಯಾ. ಬ್ರಿಜೇಶ್ ಚೌಟ ಆಕ್ರೋಶ
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದಲ್ಲಿ 70ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಕ್ಕೆ ಪ್ರಾರಂಭಿಸಿರುವ ಪಿಎಂ-ಆಯುಷ್ಮಾನ್ ಭಾರತ್ ಯೋಜನೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು ಹಾಕುವ ಮೂಲಕ ಬಡವರ ಅದರಲ್ಲಿಯೂ ಹಿರಿಯ ನಾಗರಿಕರ ಜೀವದ ಜತೆಗೆ ಚೆಲ್ಲಾಟವಾಡುವ ಅತ್ಯಂತ ಕೀಳುಮಟ್ಟದ ರಾಜಕೀಯ ಮಾಡುತ್ತಿರುವುದು ಬಹಳ ಖೇದಕರ ವಿಚಾರ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ
70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಆಯುಷ್ಮಾನ್ ಭಾರತ್ ಪಿಎಂ ಜನ್ಆರೋಗ್ಯ ಯೋಜನೆ(ಎಬಿ-ಪಿಎಂ-ಜೆಎವೈ)ಯನ್ನು ದೇಶಾದ್ಯಂತ 2024 ನವೆಂಬರ್ ತಿಂಗಳಲ್ಲಿ ಜಾರಿಗೊಳಿಸಲಾಗಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಇನ್ನು ಕೂಡ ಹಿರಿಯ ನಾಗರಿಕರ ಜೀವ ಕಾಪಾಡುವ ಅತ್ಯಮೂಲ್ಯವಾದ ಈ ಯೋಜನೆಯನ್ನು ಜಾರಿಗೆ ತಂದಿಲ್ಲ. ರಾಜ್ಯದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವ ಎಬಿ-ಪಿಎಂ-ಜೆಎವೈ ಆರೋಗ್ಯ ಯೋಜನೆಯನ್ನು ಅನುಷ್ಠಾನಗೊಳಿಸುವುದಕ್ಕೆ ಮೀನಾಮೇಷ ಎಣಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ಕ್ಯಾ. ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರವು ಕರ್ನಾಟಕದಲ್ಲಿ ಅತ್ಯಂತ ತುರ್ತಾಗಿ ಅಗತ್ಯವಿರುವ ಈ ಆರೋಗ್ಯ ಯೋಜನೆಯನ್ನು ಜಾರಿಗೊಳಿಸದೆ ಇಲ್ಲಿನ ಕೋಟ್ಯಂತರ ಹಿರಿಯ ನಾಗರಿಕರ ಜೀವದ ಜತೆ ಕರುಣೆಯಿಲ್ಲದ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ದುರದೃಷ್ಟಕರ ಹಾಗೂ ಅತ್ಯಂತ ನೋವಿನ ವಿಚಾರ. ಆಸ್ಪತ್ರೆಗಳಿಗೆ ಕ್ಯಾನ್ಸರ್ ಸೇರಿದಂತೆ ಪ್ರಮುಖ ಕಾಯಿಲೆಗಳಿಗೆ ಚಿಕಿತ್ಸೆಗೆ ಬರುವ ಹಿರಿಯ ಜೀವಗಳಿಗೆ ಚಿಕಿತ್ಸೆ ನಿರಾಕರಿಸುತ್ತಿರುವ ಸಿದ್ದರಾಮಯ್ಯ ಸರ್ಕಾರದ ಈ ರೀತಿಯ ವರ್ತನೆ ಅತ್ಯಂತ ಅಮಾನವೀಯವಾದದ್ದು. ಕೂಡಲೇ ಕರ್ನಾಟಕದ ಎಲ್ಲ ಅರ್ಹ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಒದಗಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಸರ್ಕಾರದ ಇಚ್ಚಾಶಕ್ತಿಯ ಕೊರತೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿರುವುದು ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆಗೆ ಸಾಕ್ಷಿಯಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯನ್ನು ಕಾರ್ಯಗತಗೊಳಿಸಬೇಕಾಗಿದ್ದ ರಾಜ್ಯ ಸರ್ಕಾರ ಅನುದಾನ ಹಂಚಿಕೆಯಲ್ಲಿ ಮಾಹಿತಿ ಕೊರತೆಯನ್ನು ಉಲ್ಲೇಖಿಸಿ ಕುಂಟುನೆಪ ಹೇಳುತ್ತಾ ಕಾಲಹರಣ ಮಾಡುತ್ತಿದ್ದುಆರೋಗ್ಯ ಸೌಲಭ್ಯಗಳ ಪ್ರಯೋಜನ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಕ್ಯಾ. ಚೌಟ ರಾಜ್ಯ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಬಾಣಂತಿಯರ ಮತ್ತು ನವಜಾತ ಶಿಶುಗಳ ಸರಣಿ ಸಾವು ಸಂಭವಿಸುತ್ತಿದ್ದರೂ ಕಣ್ಮುಚ್ಚಿ ಕುಳಿತಿರುವ ರಾಜ್ಯ ಸರ್ಕಾರ ಇದೀಗ ಆಯುಷ್ಮಾನ್ ಭಾರತ’ ಯೋಜನೆ ಜಾರಿಗೆ ಅಡ್ಡಗಾಲು ಹಾಕುತ್ತಿದೆ. ಮತ್ತೊಂದೆಡೆ, ಹಾಲು, ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಕೂಡ ನಿರಂತರವಾಗಿ ಏರಿಸುವ ಮೂಲಕ ಅಕ್ಷರಶಃ ಜನವಿರೋಧಿ ಮತ್ತು ಬಡವರ ವಿರೋಧಿ ಸರ್ಕಾರ ಎನ್ನುವುದನ್ನು ಸಾಬೀತುಪಡಿಸುತ್ತಿದೆ. ಹಿರಿಯ ನಾಗರಿಕರಿಗೆ ಚಿಕಿತ್ಸೆ ನಿರಾಕರಿಸುವ ಜತೆಗೆ ಆಸ್ಪತ್ರೆಗೆ ಹೋಗುವ ಬಡವರ್ಗದ ಮೃತ ಬಾಣಂತಿಯರ ಕುಟುಂಬಗಳಲ್ಲಿ ಸೂತಕದ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಖೇದಕರ ಎಂದು ಕ್ಯಾ. ಚೌಟ ಕಳವಳ ವ್ಯಕ್ತಪಡಿಸಿದ್ದಾರೆ.
ಅಮೂಲ್ಯವಾದ ಜನರ ಜೀವಗಳನ್ನು ಪಣಕ್ಕಿಟ್ಟು ರಾಜಕೀಯ ಮಾಡುವುದನ್ನು ಬಿಟ್ಟು ರಾಜ್ಯ ಸರ್ಕಾರ ತುರ್ತಾಗಿ ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ಕ್ಯಾ. ಚೌಟ ಒತ್ತಾಯಿಸಿದ್ದಾರೆ.
Post a Comment