ಮುಂಬೈ: 'ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂವಿಧಾನ ರಚನೆಕಾರರಲ್ಲ. ರಾಜಕೀಯ ಲಾಭಕ್ಕಾಗಿ ಶ್ರೀರಾಮನನ್ನು ಬಳಸಿಕೊಳ್ಳುವುದು ಸರಿಯಲ್ಲ' ಎಂದು ಶಿವಸೇನಾ(ಯುಬಿಟಿ) ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.
“ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು' ಎಂಬ ಭಾಗವತ್ ಹೇಳಿಕೆಗೆ ರಾವುತ್ ಪ್ರತಿಕ್ರಿಯೆ ನೀಡಿದ್ದಾರೆ.
“ಆರ್‌ಎಸ್‌ಎಸ್ ಮುಖ್ಯಸ್ಥರು ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಆದರೆ, ಅವರು ಸಂವಿಧಾನ ರಚನೆಕಾರರಲ್ಲ. ಅವರು ಈ ದೇಶದ ಕಾನೂನನ್ನು ರಚಿಸುವುದಕ್ಕಾಗಲಿ ಅಥವಾ ಬದಲಿಸುವುದಕ್ಕಾಗಲಿ ಆಗುವುದಿಲ್ಲ. ಅಯೋಧ್ಯೆಯಲ್ಲಿ ಬಾಲ ರಾಮನ ಪ್ರತಿಷ್ಠಾಪನೆಯಾಗಿರುವುದು ಇಡೀ ದೇಶಕ್ಕೆ ಹೆಮ್ಮೆಯ ಕ್ಷಣವಾಗಿದೆ. ಈ ಕಾರ್ಯಕ್ಕೆ ಎಲ್ಲರು ಕೊಡುಗೆ ನೀಡಿದ್ದಾರೆ. ಆದರೆ, ಅದೇ ದಿನ ದೇಶಕ್ಕೆ ಸ್ವಾತಂತ್ರ್ಯ ದಕ್ಕಿದೆ ಎನ್ನುವುದು ಅತಿಶಯೋಕ್ತಿ' ಎಂದು ರಾವುತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
'1947ರಲ್ಲಿಯೇ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ರಾಜಕೀಯ ಲಾಭಕ್ಕಾಗಿ ರಾಮನನ್ನು ಬಳಸಿಕೊಳ್ಳುವುದು ಸರಿಯಲ್ಲ' ಎಂದಿದ್ದಾರೆ.'ಸಾವಿರಾರು ವರ್ಷಗಳ ಹಿಂದೆಯೇ ಈ ನೆಲದಲ್ಲಿ ಶ್ರೀರಾಮ ನೆಲೆಸಿದ್ದಾನೆ. ಅವನಿಗಾಗಿ ನಾವು ಹೋರಾಟ ನಡೆಸಿದ್ದೇವೆ ಮತ್ತು ಆ ಹೋರಾಟವನ್ನು ಮುಂದುವರಿಸುತ್ತೇವೆ. ರಾಮನನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದರಿಂದ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕುವುದಿಲ್ಲ' ಎಂದು ಹೇಳಿದರು.
Post a Comment