ಮಂಗಳೂರು: ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಸಂಸದರು, ಶಾಸಕರನ್ನೊಳಗೊಂಡ ಬಿಜೆಪಿ ನಿಯೋಗ ಗುರುವಾರ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು.ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಶಾಸಕ ವಿ.ಸುನೀಲ್ ಕುಮಾರ್, ಸುಹಾಸ್ ಶೆಟ್ಟಿ ಕೊಲೆಗೆ ಸಂಬಂಧಿಸಿದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ. ಜಿಲ್ಲೆಯ ಎಲ್ಲ ಶಾಸಕರು, ಸಂಸದರು ಪೊಲೀಸ್ ಆಯುಕ್ತರೊಂದಿಗೆ ಚರ್ಚೆ ಮಾಡಿ ಸಾರ್ವಜನಿಕರು ಮತ್ತು ನಮ್ಮಲ್ಲಿರುವ ಅನುಮಾನ ಹೇಳಿದ್ದೇವೆ. ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡಲೇಬೇಕು. ಕೃತ್ಯದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಕೃತ್ಯಕ್ಕೆ ವಿದೇಶದಿಂದ ಹಣಕಾಸಿನ ನೆರವು ಬಂದಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಹಾಗಾಗಿ ಸ್ಥಳೀಯ ಪೊಲೀಸ ರಿಂದ ತನಿಖೆ ಸಾಧ್ಯವಿಲ್ಲ. ಸರ್ಕಾರ ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದೆ.
ಎಂಬುದು ಗೃಹ ಸಚಿವರ ಹೇಳಿಕೆಯಿಂದ ಗೊತ್ತಾಗಿದೆ ಎಂದರು.ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಎನ್‌ಐಎ ತನಿಖೆಗೆ ಮನವಿ ಮಾಡುತ್ತೇವೆ. ಮೇ 11ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಧರ್ಮಸ್ಥಳದ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ಅಂದು ಬೆಳಗ್ಗೆ ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ ಎಂದು ಸುನೀಲ್ ಕುಮಾರ್ ತಿಳಿಸಿದರು.ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ, ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಪ್ರತಾಪ್ ಸಿಂಹ ನಾಯಕ್, ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಜಗದೀಶ್ ಶೇಣವ ಮೊದಲಾದವರನ್ನೊಳಗೊಂಡ ನಿಯೋಗ ಪೊಲೀಸ್ ಆಯುಕ್ತರ ಜತೆ ಸುಮಾರು ಒಂದು ತಾಸು ಚರ್ಚೆ ನಡೆಸಿತು.
ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ, ಎಂಎಲ್‌ಸಿಗಳಾದ ಕಿಶೋರ್ ಕುಮಾರ್ ಪುತ್ತೂರು, ಪ್ರತಾಪಸಿಂಹ ನಾಯಕ್ ಅವರ ನಿಯೋಗ ಪೊಲೀಸ್ ಆಯ್ತರನ್ನು ಭೇಟಿ ಮಾಡಿತ್ತು. ಸುಹಾಸ್ ಕೊಲೆ ಪ್ರಕರಣದ ಹಿಂದೆ ಬಜ್ಜೆ ಪೊಲೀಸ್ ಠಾಣೆ ಕಾನ್‌ಸ್ಟೆಬಲ್ ಕೂಡ ಇರುವುದು ಗೊತ್ತಾಗಿದೆ. ಈ ಬಗ್ಗೆಯೂ ಆಯುಕ್ತರ ಗಮನ ಸೆಳೆದಿದ್ದೇವೆ. ಒಂದೆರಡು ದಿನಗಳ ಯೋಜನೆಯಲ್ಲಿ ಈ ಕೃತ್ಯ ನಡೆಸಲು ಸಾಧ್ಯವಿಲ್ಲ. ಇದು ಪೂರ್ವಯೋಜಿತ. ಇದರಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಸಿಗಬೇಕು.
| ವಿ.ಸುನೀಲ್ ಕುಮಾರ್ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ













































