ಮಳೆ ವೀಕ್ಷಣೆಗೆ ಮಾನ್ಯತಾ ಟೆಕ್ ಪಾರ್ಕಿಗೆ ಹೋಗಿದ್ದ ಡಿಕೆಶಿ : ’ಭಾರೀ ಆಸಾಮಿಯೊಬ್ಬರ ಭಾರೀ ಒತ್ತುವರಿ ಕಟ್ಟಡ ಕಣ್ಣಿಗೆ ಕಾಣಲಿಲ್ಲವೇ?’

Picture of Savistara

Savistara

Bureau Report

ಮನೆ, ರಸ್ತೆ, ಸೇತುವೆಗಳು ಕುಸಿದಿವೆ. ನಗರ, ಪಟ್ಟಣ, ಹಳ್ಳಿಗಳು ಜಲದಿಗ್ಬಂಧನಕ್ಕೆ ಸಿಲುಕಿ ಜನ ವಿಲವಿಲವೆನ್ನುತ್ತಿದ್ದಾರೆ. ಮೂರಾಬಟ್ಟೆಯಾಗಿರುವ ಅವರ ಬದುಕಿನ ರಕ್ಷಣೆಗೆ ಸರಕಾರದ ಕ್ರಮವೇನು ಇದು ಕರಾವಳಿಯ ಪರಿಸ್ಥಿತಿ. ಇನ್ನು, ಬೆಂಗಳೂರು ಜಲಾವೃತಗೊಂಡಿದ್ದಾಗ ಹಲವು ಪ್ರದೇಶಗಳಿಗೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ಯಾರನ್ನು ರಕ್ಷಿಸಲು ಹೊರಟಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಬೆಂಗಳೂರು : ಕೆಲವು ದಿನಗಳ ಹಿಂದೆ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಕುಂಭದ್ರೋಣ ಮಳೆಗೆ, ಸಾಕಷ್ಟು ಪ್ರದೇಶಗಳು ಅಕ್ಷರಸಃ ಜಲಾವೃತಗೊಂಡಿದ್ದವು. ಮಳೆ, ನೆರೆ ಪರಿಸ್ಥಿತಿ ವೀಕ್ಷಣೆಗೆ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಲವು ಪ್ರದೇಶಗಳಿಗೆ ಭೇಟಿ ನೀಡಿದ್ದರು. ಅದರಲ್ಲಿ, ಮಾನ್ಯತಾ ಟೆಕ್ ಪಾರ್ಕ್ ಕಡೆಗೂ ಹೋಗಿದ್ದರು.

ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಖಾತೆಯ ಸಚಿವ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಮಾನ್ಯ ಡಿಸಿಎಂ ಮಾನ್ಯತಾ ಟೆಕ್ ಪಾರ್ಕ್ ಕಡೆಗೆ ಭೇಟಿ ನೀಡಿದ್ದು, ರಾಜಕಾಲುವೆ ರಕ್ಕಸರ ರಕ್ಷಣೆಗಾ ಎಂದು ಪ್ರಶ್ನಿಸಿದ್ದಾರೆ. ಅವರ ಪಾದಸ್ಪರ್ಶದಿಂದ ರಾಜಾಕಲುವೆ ಪುನೀತವಾಗಿರಬೇಕು ಎಂದು ವ್ಯಂಗ್ಯವಾಡಿದ್ದಾರೆ.

” ಡಿಸಿಎಂ @DKShivakumar ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು”.

“ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು!! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!! ಕೊನೆಪಕ್ಷ ಅವರ ಹೆಸರನ್ನೂ ಹೇಳಲಿಲ್ಲ!!”

“ರಾಜಕಾಲುವೆಗಳ ಮೇಲೆ ಐಷಾರಾಮಿ ಸೌಧಗಳನ್ನು ಕಟ್ಟಿಕೊಂಡು ಕೋಟಿ ಕೋಟಿ ದುಡಿಯುತ್ತಿರುವ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿ.ಕೆ. ಶಿವಕುಮಾರ್ ರವರೇ? ಹೋಗಲಿ, ಅಂಥವರ ವಿರುದ್ಧ ಕ್ರಮ ಜರುಗಿಸಲು ನಿಮ್ಮ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ, ಅಧಿಕಾರ ನೀಡಿದ್ದೀರಾ? ಒಂದು ವೇಳೆ ನೀಡಿದ್ದರೆ ಆ ಅಕ್ರಮ ಕಟ್ಟಡಗಳು ಇನ್ನೂ ಯಾಕೆ ಹಾಗೆಯೇ ಇವೆ? ಎಂಬುದನ್ನು ನೀವು ಹೇಳಬೇಕಲ್ಲವೇ?’

” ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ನೀವು ಕುರ್ಚಿ ಮೇಲೆ ಕೂತು ಎರಡು ವರ್ಷವೇ ಆಯಿತು. ಅದೆಷ್ಟೋ ಬಾರಿ ಸಾಯಿ ಬಡಾವಣೆ ಮುಳುಗಿದ್ದೂ ಆಯಿತು, ತೇಲಿದ್ದೂ ಆಯಿತು! ನಿಮ್ಮಿಂದ ಆಗಲಿ ಅಥವಾ @INCKarnataka ಸರಕಾರದಿಂದ ಆಗಲಿ ಯಾವುದೇ ಪರಿಹಾರ ಸಿಗಲಿಲ್ಲ! ಬಡಾವಣೆಯ ಜನರು ನರಳುತ್ತಿರುವುದು ಮಾತ್ರ ತಪ್ಪಿಲ್ಲ. ಈ ಅಸಡ್ಡೆ ಯಾಕೆ? ಇವರೆಲ್ಲ ತೆರಿಗೆ ಕಟ್ಟುತ್ತಿಲ್ಲವೇ?” ಎಂದು ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

” ಕರಾವಳಿ ಭಾಗ ಸೇರಿ ರಾಜ್ಯದ ಉದ್ದಗಲಕ್ಕೂ ನಿರಂತರ ಧಾರಾಕಾರ ಮಳೆ ಜನಜೀವನವನ್ನು ಛಿದ್ರಗೊಳಿಸಿದೆ. ಜನ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ, ಕರಾವಳಿಗರ ಕಣ್ಣೀರು ಒರೆಸುವ ಬದಲು ಅವರ ಕಣ್ಣಲ್ಲಿ ‘ರಕ್ತಕಣ್ಣೀರು’ ಸುರಿಯಲಿ ಎಂದು ಹಪಾಹಪಿಸುತ್ತಿದೆ” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರಕಾರಕ್ಕೆ ಕರಾವಳಿ ಮಳೆ ಬಗ್ಗೆ ಚಿಂತೆ ಇಲ್ಲ. ಆದರೆ, ಕರಾವಳಿ ಕೊಲೆಗಳ ಬಗ್ಗೆ ಎಲ್ಲಿಲ್ಲದ ಕಾಳಜಿ. ಆ ಕಾಳಜಿ ಕೊಲೆಗಳನ್ನು ಹತ್ತಿಕ್ಕಲಿಕ್ಕಲ್ಲ, ಕೊಲೆಗಳಲ್ಲೂ ‘ರಾಜಕೀಯ ಕೂಳು’ ಬೇಯಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರಕಾರ ಹವಣಿಸುತ್ತಿದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

[t4b-ticker]
error: Content is protected !!