ಕರ್ನಾಟಕದ ಕಾಂಗ್ರೆಸ್ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳ ಮುಖಂಡರ ಮೇಲೆ ಮಾತ್ರ ಗುರಿಯಿಟ್ಟು ಕ್ರಮ ಕೈಗೊಳ್ಳುತ್ತಿದ್ದು. ರಾಜ್ಯ ಸರ್ಕಾರವೇ ‘ದ್ವೇಷ ಭಾಷಣ’ವನ್ನು ಪ್ರಚಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದ್ದಾರೆ.
ಬೆಂಗಳೂರು, ಜೂನ್ 2: ಕರ್ನಾಟಕದ ಕಾಂಗ್ರೆಸ್ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳ ಮುಖಂಡರ ಮೇಲೆ ಮಾತ್ರ ಗುರಿಯಿಟ್ಟು ಕ್ರಮ ಕೈಗೊಳ್ಳುತ್ತಿದ್ದು, ರಾಜ್ಯ ಸರ್ಕಾರವೇ ‘ದ್ವೇಷ ಭಾಷಣ’ವನ್ನು ಪ್ರಚಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದೂ ಸಂಘಟನೆಗಳ 15 ಮಂದಿ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ, ಸುನೀಲ್ ಕುಮಾರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ತಲವಾರು, ಕತ್ತಿ ಝಳಪಿಸಿ ಹತ್ಯೆಯ ಮಾತುಗಳನ್ನಾಡಿದವರ ಮೇಲೆ ಯಾಕೆ ಕ್ರಮವಿಲ್ಲ? ಕೇವಲ ಹಿಂದೂ ಸಂಘಟನೆಗಳ ವಿರುದ್ಧ ಮಾತ್ರ ಏಕೆ ಕಾನೂನು ಕೈಗೊಳ್ಳಲಾಗುತ್ತಿದೆ?” ಎಂದು ಅವರು ಪ್ರಶ್ನಿಸಿದ್ದಾರೆ. ಸರ್ಕಾರದ ಈ ಏಕಪಕ್ಷೀಯ ಕ್ರಮವನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ‘ಪೊಲೀಸ್ ರಾಜ್’ ಜಾರಿಗೆ ತರಲು ಯತ್ನಿಸುತ್ತಿದೆ ಎಂದು ಆರೋಪಿಸಿರುವ ಸುನೀಲ್ ಕುಮಾರ್, “ದ್ವೇಷ ಭಾಷಣ ನಿಯಂತ್ರಣದ ನೆಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದೂ ಸಂಘಟನೆಗಳ ಮುಖಂಡರ ಮೇಲೆ ಅನಗತ್ಯವಾಗಿ ಪ್ರಕರಣ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ” ಎಂದು ದೂರಿದ್ದಾರೆ.
ಹಿಂಸೆಗೆ ಪ್ರೇರಣೆ ನೀಡಿದವರು ಯಾರು?
“ದಕ್ಷಿಣ ಕನ್ನಡದಲ್ಲಿ ದ್ವೇಷ ಮತ್ತು ಹಿಂಸೆಗೆ ಪ್ರೇರಣೆ ನೀಡಿದವರು ಯಾರು? ತಲವಾರು, ಕತ್ತಿ ಝಳಪಿಸಿ ಹತ್ಯೆಯ ಬಗ್ಗೆ ಮಾತನಾಡಿದವರನ್ನು ಪೊಲೀಸರು ಏಕೆ ಮುಟ್ಟಿಲ್ಲ? ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟಿಸಿದವರ ಮೇಲೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ರವಾನಿಸಿದವರ ಮೇಲೆ ಮಾತ್ರ ಕಾನೂನು ಕ್ರಮವೇ?” ಎಂದು ಸುನೀಲ್ ಕುಮಾರ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಭಾನುವಾರ ಕಟ್ಟುನಿಟ್ಟಿನ ಕ್ರಮ ಆರಂಭಿಸಿ, ಸ್ವತಃ ಕಾರ್ಯಾಚರಣೆಗೆ ಇಳಿದಿದ್ದರು. ಇದರ ಬೆನ್ನಲ್ಲೇ ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ 15 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ವೇಳೆ, ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರನ್ನು ಕಲಬುರಗಿಯ ಶಹಾಬಾದ್‌ಗೆ ಗಡೀಪಾರು ಮಾಡಲು ನೋಟಿಸ್ ಜಾರಿಗೊಳಿಸಲಾಗಿದೆ.ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ. “ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ರಾಜಕೀಯ ಒತ್ತಡಕ್ಕೆ ಬಲಿಯಾಗಿ ಅಮಾಯಕರಿಗೆ ಕಿರುಕುಳ ನೀಡುತ್ತಿದೆ” ಎಂದು ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.













































