ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಆ.20ರವರೆಗೆ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ

Picture of Savistara

Savistara

Bureau Report

ಕರಾವಳಿಯ ಜಿಲ್ಲೆಗಳಿಗೆ ಆ.18ರಂದು ರೆಡ್ ಅಲರ್ಟ್, ಉತ್ತರ ಕನ್ನಡ ಜಿಲ್ಲೆಯ 10 ತಾಲೂಕು, ಕೊಡಗು ಜಿಲ್ಲೆಯ ಶಾಲೆಗಳಿಗೆ ರಜೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರಕುಸಿತದ ಪರಿಣಾಮ ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಸೋಮವಾರ (ಆ.18) ರೆಡ್ ಅಲರ್ಟ್ ಘೋಷಿಸಿದ್ದು, ಆ.20ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇನ್ನು, ರಾಜ್ಯಾದ್ಯಂತ ಆಗಸ್ಟ್ 23ರವರೆಗೂ ಮಳೆಯಾಗಲಿದೆ.

ಈ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್

ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ವಿವಿಧ ಜಿಲ್ಲೆಗಳಲ್ಲಿ ಆ.20ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಸೋಮವಾರವೂ (ಆ.18) ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಆಗಸ್ಟ್ 20ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಆ.18ರಂದು ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಆ.19, 20ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಬೀದ‌ರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ನಿರೀಕ್ಷೆಗಳಿವೆ. ಈ ಜಿಲ್ಲೆಗಳಿಗೆ ಆ.18, 19ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ .ಬೆಂಗಳೂರಿನಲ್ಲಿ ಆ.21ರ ವರೆಗೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಹವಾಮಾನ ವೈಶಿಷ್ಟ್ಯ ಹೇಗಿದೆ ?

ಆಂಧ್ರ ಪ್ರದೇಶ ಹಾಗೂ ಒಡಿಸ್ಸಾದ ಕರಾವಳಿ ತೀರದಲ್ಲಿ 9.6 ಕಿ.ಮೀ ಎತ್ತರದವರೆಗೆ ಸರ್ಕ್ಯೂಲೇಶನ್ ಇದೆ. ಇದರ ಪ್ರಭಾವದಿಂದ ಬಂಗಾಳ ಉಪಸಾಗರದ ಆಂಧ್ರ ಪ್ರದೇಶ ಹಾಗೂ ಒಡಿಸ್ಸಾ ಕರಾವಳಿ ತೀರದಲ್ಲಿ ವಾಯು ಭಾರ ಕುಸಿತವಾಗುವ ಹೆಚ್ಚಿನ ಸಾಧ್ಯತೆಗಳಿವೆ. ಇದರ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಆ.20ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ.

ಕೊಡಗು, ಉತ್ತರ ಕನ್ನಡ ಜಿಲ್ಲೆಗಳ ಶಾಲೆಗಳಿಗೆ ರಜೆ:

ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇದ್ದು, ಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ (ಆಗಸ್ಟ್ 18 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ, ಜೋಯಿಡಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

[t4b-ticker]
error: Content is protected !!