ಮಂಗಳೂರು: ಧರ್ಮಸ್ಥಳದ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ವಿಷಯಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಸುಮೋಟೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಅವರಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಹಿನ್ನೆಲೆ
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಿದ ಕಾಲ್ಪನಿಕ ಮತ್ತು ಸುಳ್ಳು ಮಾಹಿತಿಗಳನ್ನೊಳಗೊಂಡ ವೀಡಿಯೊವನ್ನು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಿದ ಆರೋಪ ಸಮೀರ್ ಮೇಲಿದೆ. ಈ ವೀಡಿಯೊ ಸಾರ್ವಜನಿಕರಲ್ಲಿ ಪ್ರಚೋದನೆ ಉಂಟುಮಾಡುವ ಉದ್ದೇಶವನ್ನು ಹೊಂದಿದೆ ಎಂದು ದೂರಿ, ಧರ್ಮಸ್ಥಳ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ (ಸುಮೋಟೋ) ಪ್ರಕರಣ ದಾಖಲಿಸಿಕೊಂಡಿದ್ದರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 192, 240, ಮತ್ತು 353(1) (ಬಿ) ಅಡಿಯಲ್ಲಿ ಪ್ರಚೋದನೆ ನೀಡುವ ಮತ್ತು ಸುಳ್ಳು ಮಾಹಿತಿ ಹರಡುವ ಆರೋಪದ ಮೇಲೆ ಪ್ರಕರಣವನ್ನು ದಾಖಲಿಸಲಾಗಿತ್ತು.
ಬಂಧನಕ್ಕೆ ತೆರಳಿದ್ದ ಪೊಲೀಸರು
ಪ್ರಕರಣ ದಾಖಲಾಗುತ್ತಿದ್ದಂತೆ, ಆರೋಪಿ ಯೂಟ್ಯೂಬರ್ ಸಮೀರ್‌ನನ್ನು ಬಂಧಿಸಲು ಧರ್ಮಸ್ಥಳ ಪೊಲೀಸರ ತಂಡವು ಬೆಂಗಳೂರಿಗೆ ತೆರಳಿತ್ತು. ಬೆಂಗಳೂರಿನ ಬನ್ನೇರುಘಟ್ಟ ಬಳಿಯ ಹುಲ್ಲಳ್ಳಿಯಲ್ಲಿರುವ ಸಮೀರ್ ಅವರ ಬಾಡಿಗೆ ಮನೆಯನ್ನು ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಪತ್ತೆಹಚ್ಚಲಾಗಿತ್ತು. ಆದರೆ, ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ ಸಮೀರ್ ಅಲ್ಲಿಂದ ನಾಪತ್ತೆಯಾಗಿದ್ದರು.
ನಿರೀಕ್ಷಣಾ ಜಾಮೀನು ಅರ್ಜಿ
ಬಂಧನದ ಭೀತಿಯಲ್ಲಿದ್ದ ಸಮೀರ್, ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಇದೀಗ ಸಮೀರ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.














































