ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ನೇರವಾಗಿ ಹೈಕೋರ್ಟ್ರೆ ಅರ್ಜಿ ಸಲ್ಲಿಸಿರುವುದಕ್ಕೆ ರಾಜ್ಯ ಸರ್ಕಾರ ಬುಧವಾರ ಕರ್ನಾಟಕ ಹೈಕೋರ್ಟ್ನಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ. ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೂ ನ್ಯಾಯಾಲಯಕ್ಕೆ ಬಂದಿರುವುದರಿಂದ ಅರ್ಜಿ ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದೆ.
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ನೇರವಾಗಿ ಹೈಕೋರ್ಟ್ ಅರ್ಜಿ ಸಲ್ಲಿಸಿರುವುದಕ್ಕೆ ರಾಜ್ಯ ಸರ್ಕಾರ ಬುಧವಾರ ಕರ್ನಾಟಕ ಹೈಕೋರ್ಟ್ನಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ. ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೂ ನ್ಯಾಯಾಲಯಕ್ಕೆ ಬಂದಿರುವುದರಿಂದ ಅರ್ಜಿ ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದೆ.
ಪುತ್ತೂರು ಸಹಾಯಕ ಆಯುಕ್ತರು ಸೆಪ್ಟೆಂಬರ್ 18ರಂದು ಹೊರಡಿಸಿದ್ದ ಗಡಿಪಾರು ಆದೇಶವನ್ನು ಪ್ರಶ್ನಿಸಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠ ನಡೆಸಿತು.
ಸರ್ಕಾರದ ಪರ ಹಾಜರಾದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ. “ಕರ್ನಾಟಕ ಪೊಲೀಸ್ ಕಾಯಿದೆಯ ಸೆಕ್ಷನ್ 59ರ ಅಡಿಯಲ್ಲಿ ಗಡಿಪಾರು ಆದೇಶ ಹೊರಡಿಸಿದ 30 ದಿನಗಳೊಳಗೆ ಬಾಧಿತ ವ್ಯಕ್ತಿಗೆ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಆದರೆ, ಅರ್ಜಿದಾರರು ನೇರವಾಗಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದು. ಇದು ವಿಚಾರಣಾ ಮಾನ್ಯತೆ ಹೊಂದಿಲ್ಲ” ಎಂದು ವಾದಿಸಿದರು.
ತಿಮರೋಡಿ ಪರ ವಕೀಲರು, “ಅರ್ಜಿದಾರರು ನಿರೀಕ್ಷಣಾ ಜಾಮೀನು ಕೋರಿ ವಿಚಾರಣಾಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಗುರುವಾರ ಅದರ ವಿಚಾರಣೆ ನಡೆಯಲಿದೆ. ಹಾಗಾಗಿ ಈ ಅರ್ಜಿಯ ವಿಚಾರಣೆಯನ್ನು ಮುಂದೂಡಬೇಕು” ಎಂದು ಪೀಠಕ್ಕೆ ಮನವಿ ಮಾಡಿದರು.
ವಾದ ಪ್ರತಿವಾದ ಆಲಿಸಿದ ಪೀಠ, ನಿರೀಕ್ಷಣಾ ಜಾಮೀನು ಅರ್ಜಿ ಕುರಿತು ವಿಚಾರಣಾಧೀನ ನ್ಯಾಯಾಲಯದಲ್ಲಿ ಏನಾಗಲಿದೆ ಎಂಬುದನ್ನು ಕಾಯೋಣ. ಅರ್ಜಿದಾರರು ಸೆಕ್ಷನ್ 59ರ ಪ್ರಕಾರ ಮೊದಲು ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಿ, ನಂತರ ಇಲ್ಲಿಗೆ ಬನ್ನಿ. ಯಾವುದೇ ಅಡ್ಡದಾರಿ ಬಳಸಬೇಡಿ ಎಂದು ಮೌಖಿಕವಾಗಿ ಸೂಚಿಸಿತಲ್ಲದೆ, ವಿಚಾರಣೆಯನ್ನು ಸೋಮವಾರಕ್ಕೆ (ಅಕ್ಟೋಬರ್ 13) ಮುಂದೂಡಿತು.ಈ ವೇಳೆ ತಿಮರೋಡಿ ಪರ ವಕೀಲರು, ಅರ್ಜಿಯ ಮುಂದಿನ ವಿಚಾರಣೆವರೆಗೆ ಮಧ್ಯಂತರ ಆದೇಶ ವಿಸ್ತರಿಸುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಜಿ ಶಶಿಕಿರಣ್ ಶೆಟ್ಟಿ. “ಅರ್ಜಿದಾರರ ವಿರುದ್ಧ ಆತುರದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಮಧ್ಯಂತರ ಆದೇಶ ಮಾಡಿದೆ. ಅರ್ಜಿದಾರರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶಿಸಲಾಗಿದ್ದು, ಈಗಾಗಲೇ ಅವರು ತಲೆಮರೆಸಿಕೊಂಡಿದ್ದಾರೆ. ಹೀಗಿರುವಾಗ, ಮಧ್ಯಂತರ ಆದೇಶ ವಿಸ್ತರಿಸುವ ಪ್ರಶ್ನೆಯೇ ಎದುರಾಗುವುದಿಲ್ಲ” ಎಂದರು.
ಆಗ ಪೀಠ, “ಅರ್ಜಿದಾರರು ತಲೆಮರೆಸಿಕೊಂಡಿದ್ದಾರೆ ಎಂದಾದರೆ, ಅಲ್ಲಿಗೆ ಅವರ ಗಡಿಪಾರು ಆದೇಶದ ಉದ್ದೇಶ ಈಡೇರಿದಂತಾಯಿತಲ್ಲವೇ?” ಎಂದು ಲಘು ಧಾಟಿಯಲ್ಲಿ ನುಡಿಯಿತು. ಅಂತಿಮವಾಗಿ, ಗಡಿಪಾರು ಆದೇಶ ಸಂಬಂಧ ಆತುರದ ಕ್ರಮಕ್ಕೆ ಮುಂದಾಗದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಅರ್ಜಿಯ ಮುಂದಿನ ವಿಚಾರಣೆವರೆಗೆ ವಿಸ್ತರಿಸಿದ ಪೀಠವು ಅಕ್ಟೋಬರ್ 12ರ ಮಧ್ಯಾಹ್ನ 2.30ಕ್ಕೆ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಿತು.ರಾಜ್ಯ ಸರ್ಕಾರದ ಪರ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಬಂಟ್ವಾಳ ಡಿವೈಎಸ್ಪಿ ವಿಜಯಪ್ರಸಾದ್ ಹಾಜರಿದ್ದರು. ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರಾದ ತಾರನಾಥ ಪೂಜಾರಿ ಮೂಡಬಿದ್ರೆ, ಎಂ.ಆರ್. ಬಾಲಕೃಷ್ಣ ಸುಳ್ಯ ಮತ್ತು ಮೋಹಿತ್ ಕುಮಾರ್ ಪುತ್ತೂರು ಉಪಸ್ಥಿತರಿದ್ದರು.
ಮಹೇಶ್ ಶೆಟ್ಟಿ ಅವರು ರಾಜ್ಯ ಸರ್ಕಾರ, ಪುತ್ತೂರು ಸಹಾಯಕ ಆಯುಕ್ತ, ಬಂಟ್ವಾಳ ಡಿವೈಎಸ್ಪಿ ಮತ್ತು ಬೆಳ್ತಂಗಡಿ ಪೊಲೀಸ್ ಇನ್ಸೆಕ್ಟರ್ ಅವರನ್ನು ಈ ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ.














































