ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಡ್ಯ ಮೂಲದ ಚಿನ್ನಯ್ಯನಿಗೆ ಆಶ್ರಯ ನೀಡಿದ್ದಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ಅವರ ತಿಮರೋಡಿಯ ಮನೆಯಲ್ಲಿ ಮಹಜರು ನಡೆಸಿದಾಗ ಎರಡು ತಲವಾರುಗಳು ಮತ್ತು ಒಂದು ಬಂದೂಕು ಪತ್ತೆಯಾಗಿತ್ತು. ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್ ಅವರ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸರು ಮಹೇಶ್ ಶೆಟ್ಟಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. ಭೂಗತರಾಗಿದ್ದ ಮಹೇಶ್ ಶೆಟ್ಟಿ ಅವರು ಮಂಗಳೂರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿತ್ತು. ಈಗ ಹೈಕೋರ್ಟ್ನಲ್ಲಿ ಸಲ್ಲಿಸಿದ ಅರ್ಜಿಯಲ್ಲಿ ಪ್ರಕರಣದ ಎಲ್ಲಾ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡುವಂತೆ ಕೋರಿದ್ದರು.
ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳು, ಮಹೇಶ್ ಶೆಟ್ಟಿ ಅವರ ಅರ್ಜಿಯನ್ನು ಪುರಸ್ಕರಿಸಿ, ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ಗೆ ತಡೆಯಾಜ್ಞೆ ನೀಡಿದ್ದಾರೆ.ಮಹೇಶ್ ಶೆಟ್ಟಿ ಪರ ವಕೀಲರಾದ ತಾರನಾಥ ಪೂಜಾರಿ ಮೂಡಬಿದ್ರೆ, ಎಂ.ಆರ್. ಬಾಲಕೃಷ್ಣ ಸುಳ್ಯ ಮತ್ತು ಮೋಹಿತ್ ಕುಮಾರ್ ಪುತ್ತೂರು ವಾದಿಸಿದ್ದರು.














































