ಸ್ಫೋಟಕ ಸೆಂಚುರಿ : ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮ

Picture of Savistara

Savistara

Bureau Report

ಟಿ20 ಕ್ರಿಕೆಟ್​ನಲ್ಲಿ ಅಭಿಷೇಕ್ ಶರ್ಮಾ (Abhishek sharma) ಸಿಡಿಲಬ್ಬರದ ಮುಂದುವರೆದಿದೆ. ಈ ಬಾರಿ ಅಬ್ಬರಿಸಿದ್ದು ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ. ಅದು ಕೂಡ ಸ್ಫೋಟಕ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. ಈ ಸೆಂಚುರಿಯೊಂದಿಗೆ ವಿಶ್ವ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಹೈದಾರಾಬಾದ್​ನ ಜಿಮ್​ಖಾನ ಮೈದಾನದಲ್ಲಿ ನಡೆದ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿ ಪಂದ್ಯದಲ್ಲಿ ಪಂಜಾಬ್ ಹಾಗೂ ಬಂಗಾಳ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಹಾಗೂ ಪ್ರಭ್ ಸಿಮ್ರಾನ್ ಸಿಂಗ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು.

ಅದರಲ್ಲೂ ಬಂಗಾಳ ತಂಡದ ಅನುಭವಿ ಬೌಲರ್​ಗಳ ಬೆಂಡೆತ್ತಿದ ಅಭಿಷೇಕ್ ಶರ್ಮಾ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿ ಬಳಿಕ ಕೂಡ ಸಿಡಿಲಬ್ಬರ ಮುಂದುವರೆಸಿದ ಯುವ ದಾಂಡಿಗ ಕೇವಲ 32 ಎಸೆತಗಳಲ್ಲಿ ಭರ್ಜರಿ ಸೆಂಚುರಿ ಪೂರೈಸಿದರು.

ಈ ಶತಕದೊಂದಿಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ 35 ಕ್ಕಿಂತ ಕಡಿಮೆ ಎಸೆತಗಳಲ್ಲಿ 2 ಶತಕ ಸಿಡಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಭಿಷೇಕ್ ಶರ್ಮಾಗೂ ಮುನ್ನ ಇಂತಹದೊಂದು ದಾಖಲೆ ಬರೆದಿರುವುದು ಗುಜರಾತ್​ನ ಉರ್ವಿಲ್ ಪಟೇಲ್ ಎಂಬುದು ವಿಶೇಷ.

2024 ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲೇ ಉರ್ವಿಲ್ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಅಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಸರ್ವಿಸಸ್ ವಿರುದ್ಧದ ಪಂದ್ಯದಲ್ಲಿ ಉರ್ವಿಲ್ 31 ಎಸೆತಗಳಲ್ಲಿ ಸೆಂಚುರಿ ಬಾರಿಸಿದ್ದಾರೆ. ಈ ಮೂಲಕ 35 ಕ್ಕಿಂತ ಕಡಿಮೆ ಎಸೆತಗಳಲ್ಲಿ ಎರಡು ಶತಕ ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ 32 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಅಭಿಷೇಕ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದಕ್ಕೂ ಮುನ್ನ 2024 ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯಪ್ರದೇಶ್ ವಿರುದ್ಧ ಅಭಿಷೇಕ್ ಶರ್ಮಾ ಕೇವಲ 28 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಇದೀಗ ಮತ್ತೊಮ್ಮೆ ವೇಗದ ಶತಕ ಬಾರಿಸಿ 35ಕ್ಕಿಂತ ಕಡಿಮೆ ಎಸೆತಗಳಲ್ಲಿ 2 ಟಿ20 ಶತಕ ಬಾರಿಸಿದ ವಿಶ್ವದ ಮೊದಲ ಎಡಗೈ ದಾಂಡಿಗ ಎನಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ 52 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ 16 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 148 ರನ್ ಬಾರಿಸಿದ್ದಾರೆ. ಮತ್ತೊಂದೆಡೆ ಪ್ರಭ್​ ಸಿಮ್ರಾನ್ 35 ಎಸೆತಗಳಲ್ಲಿ 70 ರನ್ ಚಚ್ಚಿದ್ದಾರೆ. ಇನ್ನು ಅಂತಿಮ ಓವರ್​ಗಳ ವೇಳೆ ಅಬ್ಬರಿಸಿದ ರಮಣ್​ದೀಪ್ ಸಿಂಗ್ ಕೇವಲ 15 ಎಸೆತಗಳಲ್ಲಿ 39 ರನ್​ ಬಾರಿಸಿದರು. ಈ ಮೂಲಕ ಪಂಜಾಬ್ ತಂಡ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಬರೋಬ್ಬರಿ 310 ರನ್​ ಕಲೆಹಾಕಿದೆ.

[t4b-ticker]
error: Content is protected !!