ಬೆಂಗಳೂರು (ಮಾ.04): ಕರ್ನಾಟಕ ಲೋಕಸೇವಾ ಆಯೋಗದ (KPSC) ಪರೀಕ್ಷಾ ಪ್ರಕ್ರಿಯೆಗಳು ಮತ್ತೊಮ್ಮೆ ವಿವಾದದ ಸುಳಿಗೆ ಸಿಲುಕಿವೆ. ಇತ್ತೀಚೆಗೆ ಬಿಡುಗಡೆಯಾದ ಪರೀಕ್ಷಾ ಫಲಿತಾಂಶಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಕೆಪಿಎಸ್‌ಸಿ ಕಾರ್ಯದರ್ಶಿ ಜ್ಯೋತಿ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆಗೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿ ಅಕ್ರಮದ ಸಾಧ್ಯತೆಗಳನ್ನು ತಳ್ಳಿಹಾಕಿದ್ದಾರೆ.
ಭ್ರಷ್ಟಾಚಾರ ನಡೆದಿಲ್ಲ, ಇದು ಪಾರದರ್ಶಕ ಫಲಿತಾಂಶ
ಕೆಪಿಎಸ್‌ಸಿ ಫಲಿತಾಂಶದ ಬಗ್ಗೆ ಕೇಳಿಬರುತ್ತಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಜ್ಯೋತಿ, ‘ಕೆಪಿಎಸ್‌ಸಿ ಫಲಿತಾಂಶದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ. ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಿ ಫಲಿತಾಂಶ ಬಿಡುಗಡೆ ಮಾಡಲಾಗಿದೆ. ಯಾವುದೇ ಆಧಾರವಿಲ್ಲದೆ ಭ್ರಷ್ಟಾಚಾರದ ಆರೋಪ ಮಾಡುವುದು ಸರಿಯಲ್ಲ’ ಎಂದು ಸಮರ್ಥಿಸಿಕೊಂಡರು. ಈ ವಿಚಾರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗಂಭೀರವಾಗಿ ಪರಿಗಣಿಸಿದ್ದು, ವರದಿ ಕೇಳಿದ್ದಾರೆ. ‘ಇನ್ನೆರಡು ದಿನಗಳಲ್ಲಿ ನಾವು ಸರ್ಕಾರಕ್ಕೆ ವಿವರವಾದ ವರದಿ ಸಲ್ಲಿಸಲಿದ್ದೇವೆ. ಆಂತರಿಕವಾಗಿಯೂ ತನಿಖೆ ನಡೆಯಲಿದೆ’ ಎಂದು ತಿಳಿಸಿದರು.
ಒಂದೇ ಕೊಠಡಿಯಲ್ಲಿ 10ಕ್ಕೂ ಹೆಚ್ಚು ಮಂದಿ ಪಾಸ್: ಇದೇ ಮೊದಲು!
ಪರೀಕ್ಷಾ ಅಕ್ರಮದ ಅನುಮಾನಕ್ಕೆ ಮುಖ್ಯ ಕಾರಣವಾಗಿದ್ದು ಒಂದೇ ಪರೀಕ್ಷಾ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಅಭ್ಯರ್ಥಿಗಳು ಪಾಸಾಗಿರುವುದು. ಈ ಬಗ್ಗೆ ಮಾತನಾಡಿದ ಕಾರ್ಯದರ್ಶಿ ಜ್ಯೋತಿ, ‘ಸುಮಾರು 5,700ಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಂದು ಕೊಠಡಿಯಲ್ಲಿ 24 ಅಭ್ಯರ್ಥಿಗಳು ಇರುತ್ತಾರೆ. ಅದರಲ್ಲಿ 10 ರಿಂದ 12 ಅಭ್ಯರ್ಥಿಗಳು ಆಯ್ಕೆಯಾಗುವುದು ಸಂಭವನೀಯ. ಆದರೆ, ಕೆಪಿಎಸ್‌ಸಿ ಇತಿಹಾಸದಲ್ಲೇ ಒಂದೇ ರೂಮ್‌ನಲ್ಲಿ ಇಷ್ಟು ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಪಾಸ್ ಆಗಿರುವುದು ಇದೇ ಮೊದಲು ಎನಿಸುತ್ತದೆ. ಇದನ್ನು ನಾನು ಖುದ್ದಾಗಿ ತನಿಖೆ ನಡೆಸುತ್ತಿದ್ದೇನೆ, ಇದಕ್ಕಾಗಿ ಯಾವುದೇ ಪ್ರತ್ಯೇಕ ಸಮಿತಿ ರಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.













































