ನಾಳೆ ನಿತೀಶ್ ಕುಮಾರ್ ನೇತೃತ್ವದಲ್ಲಿ ಅಂತಿಮ ಸಚಿವ ಸಂಪುಟ ಸಭೆ: ಯಾರಾಗಲಿದ್ದಾರೆ ಮುಂದಿನ ಸಿಎಂ ?

Picture of Savistara

Savistara

Bureau Report

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಒಂದು ಮಹತ್ವದ ಯುಗಅಂತ್ಯಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಮುಖ್ಯಮಂತ್ರಿ ನಿತೀಶ್ ಕುಮಾ‌ರ್ ಅವರು ಏಪ್ರಿಲ್ 14ರಂದು ತಮ್ಮ ಅಂತಿಮ ಸಚಿವ ಸಂಪುಟ ಸಭೆಯನ್ನು ನಡೆಸಲಿದ್ದು, ಅದರ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಈಗ ಮನೆಮಾಡಿದೆ.ನಿತೀಶ್ ಕುಮಾ‌ರ್ ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಏಪ್ರಿಲ್ 10ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಂಸತ್ತಿನ ಮೇಲ್ಮನೆಯ ಸದಸ್ಯರಾಗಿ ಆಯ್ಕೆಯಾದ ಕಾರಣ, ಅವರು ಬಿಹಾರದ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಇದರೊಂದಿಗೆ ಸುಮಾರು ಎರಡು ದಶಕಗಳ ಕಾಲ ಬಿಹಾರದ ರಾಜಕೀಯವನ್ನು ನಿಯಂತ್ರಿಸಿದ್ದ ನಿತೀಶ್ ಯುಗ ಈಗ ಅಂತ್ಯಗೊಳ್ಳುತ್ತಿದೆ.ಬಿಹಾರದ ಆಡಳಿತಾರೂಢ ಎನ್‌ಡಿಎ (NDA) ಮೈತ್ರಿಕೂಟದಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದರಿಂದ, ಈ ಬಾರಿ ಬಿಜೆಪಿಯಿಂದಲೇ ಮುಖ್ಯಮಂತ್ರಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಇದರಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರುಗಳನ್ನು ಗಮನಿಸುವುದಾದರೆ.

ಸಾಮ್ರಾಟ್ ಚೌಧರಿ : ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ಇವರು ಮುಖ್ಯಮಂತ್ರಿ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಒಬಿಸಿ (ಕುಶ್ವಾಹ) ಸಮುದಾಯದ ಪ್ರಬಲ ನಾಯಕರಾದ ಇವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

ನಿತ್ಯಾನಂದ್‌ ರೈ: ಕೇಂದ್ರ ಸಚಿವರಾಗಿರುವ ಇವರು ನಾಲ್ಕು ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದು, ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ದಿಲೀಪ್‌ ಕುಮಾ‌ರ್ ಜೈಸ್ವಾಲ್: ವಿಧಾನ ಪರಿಷತ್‌ ಸದಸ್ಯಹಾಗೂ ಮಾಜಿ ರಾಜ್ಯಾಧ್ಯಕ್ಷರಾಗಿರುವ ಇವರ ಹೆಸರೂ ಸಹ ಪರಿಗಣನೆಯಲ್ಲಿದೆ.

ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ನೇಮಿಸಲಾಗಿದ್ದು, ಏಪ್ರಿಲ್ 14ರಂದು ಸಂಜೆ ವೇಳೆಗೆ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಲ್ಲಿ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಏಪ್ರಿಲ್ 15ರಂದು ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭ ನಡೆಯುವ ನಿರೀಕ್ಷೆಯಿದೆ.

[t4b-ticker]
error: Content is protected !!