ದೇಶದ ಸಂವಿಧಾನವನ್ನು ಬಿಜೆಪಿ – ಆರ್‌ಎಸ್‌ಎಸ್ ನಾಶಪಡಿಸುತ್ತಿವೆ: ರಾಹುಲ್ ಗಾಂಧಿ

Picture of Savistara

Savistara

Bureau Report

ರಾಯ್‌ಗಂಜ್ (ಪಶ್ಚಿಮ ಬಂಗಾಳ): ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ “ದ್ವೇಷ ತುಂಬಿದ ಚಿಂತನೆಗಳು” ದೇಶದ ಸಂವಿಧಾನವನ್ನು ನಾಶಪಡಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಬಿಜೆಪಿ ಪಕ್ಷವು “ಮತಗಳ ಕಳ್ಳತನ”ದಲ್ಲಿ ತೊಡಗಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ.ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ರಾಯ್‌ಗಂಜ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ಬಿಜೆಪಿಯನ್ನು ಕಿತ್ತೊಗೆಯಬೇಕಾದ ಅನಿವಾರ್ಯತೆ ಇದೆ ಎಂದು ಪ್ರತಿಪಾದಿಸಿದರು.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ದ್ವೇಷದ ರಾಜಕಾರಣ ಸಂವಿಧಾನದ ಆಶಯಗಳನ್ನೇ ಹೂತುಹಾಕುತ್ತಿದೆ. ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಮತಗಳನ್ನು ಕದಿಯುವ ಮೂಲಕ ಪ್ರಜಾಪ್ರಭುತ್ವವನ್ನು ಧ್ವಂಸ ಮಾಡುತ್ತಿವೆ,” ಎಂದು ರಾಹುಲ್ ಗಾಂಧಿ ಕಿಡಿಕಾರಿದರು.

ಮಮತಾ ಬ್ಯಾನರ್ಜಿ ಸರ್ಕಾರಕ್ಕೂ ಟೀಕೆ

ಬಿಜೆಪಿಯಷ್ಟೇ ಅಲ್ಲದೆ, ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧವೂ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ಅವರು ದೂರಿದರು.

“ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಐದು ಲಕ್ಷ ಜನರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ವಾಸ್ತವದಲ್ಲಿ 84 ಲಕ್ಷ ಯುವಕರು ನಿರುದ್ಯೋಗ ಭತ್ಯೆಗಾಗಿ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ,” ಎಂದು ಅವರು ಅಂಕಿಅಂಶಗಳ ಸಮೇತ ಟೀಕಿಸಿದರು.ಬಿಜೆಪಿಯ ಹಿಂದುತ್ವದ ಅಜೆಂಡಾ ಮತ್ತು ರಾಜ್ಯ ಸರ್ಕಾರದ ಆಡಳಿತಾತ್ಮಕ ವೈಫಲ್ಯಗಳೆರಡನ್ನೂ ಕಾಂಗ್ರೆಸ್‌ ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ.

[t4b-ticker]
error: Content is protected !!