ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ಜನತಾ ಪಾರ್ಟಿ (ಸಿಜೆಪಿ) ಆಯೋಜಿಸಿದ್ದ ಸಭೆಯಲ್ಲಿ ಎರಡು ಬಣಗಳ ನಡುವೆ ತಿಕ್ಕಾಟ ನಡೆಯುವ ಸಾಧ್ಯತೆ ಇದ್ದಿದ್ದರಿಂದ ಆರು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಜೆಪಿಯ ಬೆಂಬಲಿಗರು ಹಾಗೂ ವಿರೋಧಿಗಳ ನಡುವೆ ತಿಕ್ಕಾಟ ನಡೆಯಯುವ ಸಾಧ್ಯತೆ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆರು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಕಾನೂನು ಸುವ್ಯವಸ್ಥೆ ಸಮಸ್ಯೆಯಾಗದೆ ಪ್ರತಿಭಟನೆ ಶಾಂತವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ.ಪ್ರತಿಭಟನಾ ಸ್ಥಳದಲ್ಲಿ ತೊಂದರೆ ಉಂಟು ಮಾಡಲು ಯತ್ನಿಸುತ್ತಿದ್ದಾಗ ಆರು ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಸುದೈವವಶಾತ್ ಯಾವುದೇ ರೀತಿಯ ಅಹಿತಕರ ಘಟನೆ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪೈ ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪರೀಕ್ಷೆಗಳಲ್ಲಿ ನಡೆದ ಅವ್ಯವಹಾರ ಸಂಬಂಧ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.ಜಂತರ್ ಮಂತರ್ ಸೇರಿ ರಾಷ್ಟ್ರ ರಾಜಧಾನಿಯ ಪ್ರಮುಖ ಪ್ರದೇಶಗಳಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ನವದೆಹಲಿ ಜಿಲ್ಲೆಯಾದ್ಯಂತ ಹಾಗೂ ಇತರ ಪ್ರದೇಶಗಳಲ್ಲಿ ಒಂದು ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ದೆಹಲಿ ಗಡಿ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಏರ್ಪಡಿಸಲಾಗಿತ್ತು.










































