ರಾಜ್ಯ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬಳಿಕ ಅಡ್ಡಮತದಾನದ ಆರೋಪಗಳು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಕೆಲ ನಾಯಕರಿಗೆ ಸಮನ್ಸ್ ಜಾರಿ ಮಾಡಿದೆ ಎನ್ನಲಾಗಿದೆ.
ಹೈಕಮಾಂಡ್‌ನಿಂದ ಸ್ಪಷ್ಟನೆಗೆ ಕರೆ
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಜೂನ್ 23ರಂದು ವಿಜಯೇಂದ್ರ ಹಾಗೂ ಇತರ ನಾಯಕರೊಂದಿಗೆ ಸಭೆ ನಡೆಸಲಿದ್ದು, ಚುನಾವಣೆಯಲ್ಲಿ ನಡೆದ ಬೆಳವಣಿಗೆಗಳ ಕುರಿತು ವಿವರ ಕೇಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್‌ಗೆ ಐದು ಸ್ಥಾನಗಳ ಗೆಲುವು
ಏಳು ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಸ್ಥಾನಗಳನ್ನು ತನ್ನದಾಗಿಸಿಕೊಂಡರೆ, ಬಿಜೆಪಿ ಎರಡು ಸ್ಥಾನಗಳಲ್ಲಿ ಜಯ ಸಾಧಿಸಿತು. ಜೆಡಿಎಸ್ ಅಭ್ಯರ್ಥಿಗೆ ಸೋಲು ಎದುರಾಯಿತು.
ಅಡ್ಡ ಮತದಾನದ ಅನುಮಾನ
ಕಾಂಗ್ರೆಸ್ ಅಭ್ಯರ್ಥಿಗಳಿಗೆ ನಿರೀಕ್ಷೆಗಿಂತ ಹೆಚ್ಚು ಮತಗಳು ಲಭಿಸಿರುವುದರಿಂದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರ ಕೆಲವರು ಅಡ್ಡ ಮತದಾನ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಕೆಲ ಮತಗಳು ಅಮಾನ್ಯವಾಗಿರುವುದೂ ಚರ್ಚೆಗೆ ಕಾರಣವಾಗಿದೆ. ಪಕ್ಷಕ್ಕೆ ದ್ರೋಹ ಎಸಗಿದವರನ್ನು ಗುರುತಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.
ತನಿಖೆಯತ್ತ ಬಿಜೆಪಿ ಗಮನ
ಯಾರು ಅಡ್ಡಮತದಾನ ಮಾಡಿದ್ದಾರೆ ಮತ್ತು ಅದರ ಹಿಂದೆ ಇರುವ ಕಾರಣಗಳೇನು ಎಂಬುದರ ಕುರಿತು ಮಾಹಿತಿ ಸಂಗ್ರಹಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿಜಯೇಂದ್ರ ತಿಳಿಸಿದ್ದಾರೆ.










































