ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಭಾರಿ ಮಳೆಯಿಂದಾಗಿ ಪ್ರಮುಖ ರಸ್ತೆ ಸಂಪರ್ಕಗಳು ಕಡಿತಗೊಂಡು ಸಾರ್ವಜನಿಕರು ಪರದಾಡುವಂತಾಗಿದೆ. ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ.
ಇಂದು ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಜುಲೈ 1ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜುಲೈ 2ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಳ್ಳಪ್ರದೇಶಗಳು ಜಲಾವೃತಗೊಂಡಿದ್ದು, ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 2 ರವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ತಿಳಿಸಿದ್ದಾರೆ.ಇನ್ನು ಎರಡು-ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ನದಿತೀರ ಹಾಗೂ ಕಡಲತೀರಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ಭೇಟಿ ನೀಡದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.












































