ಮಂಗಳೂರು | ₹5.29 ಕೋಟಿ ಮೌಲ್ಯದ 5 ಕೆ. ಜಿ 196 ಎಂಡಿಎಂಎ ವಶ

Picture of Savistara

Savistara

Bureau Report

ಮಂಗಳೂರು: ನಿಷೇಧಿತ ಮಾದಕ ಪದಾರ್ಥ ಎಂಡಿಎಂಎಯನ್ನುಭಾರಿ ಪ್ರಮಾಣದಲ್ಲಿ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿಯ ಇಬ್ಬರು ಆರೋಪಿಗಳನ್ನು ಇಲ್ಲಿನ ಸಿಸಿಬಿ ಪೊಲೀಸರು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಬಂಧಿಸಿದ್ದಾರೆ. ಆರೋಪಿಗಳಿಂದ 5 ಕೆ.ಜಿ 196 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದು, ಅದರ ಮೌಲ್ಯ ₹ 5.29 ಕೋಟಿ ಎಂದು ಅಂದಾಜಿಸಲಾಗಿದೆ.

ಈ ಕುರಿತು ಇಲ್ಲಿ ಸುದ್ದಿಗೊಷ್ಠಿಯಲ್ಲಿ ಮಾಹಿತಿ ನೀಡಿದ ನಗರ ಪೊಲೀಸ್ ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ, ‘ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಇಂದಬೆಟ್ಟು ಗ್ರಾಮದ ಬಂಗಾಡಿಯ ಮೊಹಮ್ಮದ್ ಅಲ್ಪಾಜ್ (28 ವರ್ಷ) ಹಾಗೂ ಉಜಿರೆ ಬಳಿಯ ಲಾಯಿಲಾ ಗ್ರಾಮದ ಹಳಪೇಟೆಯ ವಿವೇಕಾನಂದ ನಗರದ ಮೊಹಮ್ಮದ್ ಮುಸ್ತಾಫಾ (28) ಬಂಧಿತ ಆರೋಪಿಗಳು. ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ ತಂದಿದ್ದ ಅವರು, ಅದನ್ನು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಬಂಧಿಸಲಾಗಿದೆ. ಅವರನ್ನು ಶೀಘ್ರವೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು’ ಎಂದರು.

‘ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಗುಡ್ಡೆ ವಾಟರ್‌ ಟ್ಯಾಂಕ್ ಬಳಿಯ ಮನೆಯೊಂದರಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬಾತನನ್ನು ಜೂನ್ 25 ರಂದು ಬಂಧಿಸಿದ್ದರು.ಆತನಿಂದ ಅಂದಾಜು ₹ 1.50 ಲಕ್ಷ ಮೌಲ್ಯದ 15.17 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ಆತನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ವೇಳೆ ಆತ ಎಂಡಿಎಂಎ ಪೂರೈಸಿದ ಪೆಡ್ಡರ್ ಗಳ ಮಾಹಿತಿ ನೀಡಿದ್ದ. ಅದರ ಆಧಾರದಲ್ಲಿ ಆರೋಪಿಗಳಾದ ಮೊಹಮ್ಮದ್ ಅಲ್ಪಾಜ್ ಹಾಗೂ ಮೊಹಮ್ಮದ್ ಮುಸ್ತಾಫಾ ಅವರ ಚಲನ ವಲನಗಳ ಮೇಲೆ ಸಿಸಿಬಿ ಪೊಲೀಸರು ಕಣ್ಣಿಟ್ಟಿದ್ದರು. ಅವರು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ ಅವರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿರುವ ರಾಯಲ್ ಇನ್ ಲಾಡ್ಜ್ ನಲ್ಲಿ ಬಂಧಿಸಲಾಗಿದೆ’ ಎಂದರು.’ಒಟ್ಟು ₹ 5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ, ಬ್ಯಾಗ್ ಮತ್ತು ಮೊಬೈಲ್ ಫೋನ್ ಗಳನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಮೊಹಮ್ಮದ್ ಅಲ್ಪಾಜ್ ವಿರುದ್ಧ ಈ ಹಿಂದೆ 2024 ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಾಗೂ 2026 ರಲ್ಲಿ ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಎಂ.ಡಿ.ಎಂ.ಎ ಮಾರಾಟ ಮಾಡಿದ ಬಗ್ಗೆ ಪ್ರಕರಣಗಳು ದಾಖಲಾಗಿದ್ದವು.ಆರೋಪಿಗಳು ದೆಹಲಿಯಲ್ಲಿ ಮಾದಕವಸ್ತುವನ್ನು ಖರೀದಿಸಿ, ಬೆಂಗಳೂರು ನಗರವನ್ನು ಕೇಂದ್ರವಾಗಿಸಿಕೊಂಡು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹಾಗೂ ಕೇರಳ ರಾಜ್ಯದ ಕೆಲ ಪ್ರದೇಶಗಳಿಗೆ ಎಂಡಿಎಂಎ ಪೂರೈಕೆ ಮಾಡುತ್ತಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ಮಾದಕ ಪದಾರ್ಥ ಮಾರಾಟ ದಂಧೆಯಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

[t4b-ticker]
error: Content is protected !!