ಉಪಸಭಾಪತಿ ಪ್ರಾಣೇಶ್‌ಗೆ ಸುಪ್ರೀಂ ಕೋರ್ಟ್‌ನಿಂದ ಹಿನ್ನಡೆ

Picture of Savistara

Savistara

Bureau Report

ನವದೆಹಲಿ: 2021ರ ವಿಧಾನಪರಿಷತ್ ಚುನಾವಣೆಯ ಮತಗಳಮರುಎಣಿಕೆಗೆ ನಿರ್ದೇಶಿಸಿದ ಹೈಕೋರ್ಟ್‌ ಆದೇಶದ ವಿರುದ್ಧ ವಿಧಾನಪರಿಷತ್‌ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.

ಕಾಯ್ದಿರಿಸಿದ್ದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ನಿ ಹಾಗೂ ವಿಪುಲ್ ಎಂ. ಪಂಚೋಲಿ ಅವರಿದ್ದ ಪೀಠ ಪ್ರಕಟಿಸಿತು. ಪ್ರಾಣೇಶ್ ಅವರ ವಿಶೇಷ ಮೇಲ್ಮನವಿ ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಅಭಿಪ್ರಾಯಪಟ್ಟ ಪೀಠ, ಮರು ಮತ ಎಣಿಕೆಯ ಫಲಿತಾಂಶ ಘೋಷಿಸುವಂತೆ ನಿರ್ದೇಶನ ನೀಡಿತು.’ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ’ ಎಂದು 2025ರ ಜನವರಿ 9ರಂದು ಹೈಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಾಣೇಶ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. 12 ಮತಗಳನ್ನು ಪ್ರತ್ಯೇಕವಾಗಿ ಇರಿಸಿ, ಮರು ಎಣಿಕೆ ಮಾಡಿ ವರದಿ ಕಳುಹಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.ಮರು ಮತ ಎಣಿಕೆ 2025ರ ಫೆಬ್ರುವರಿಯಲ್ಲಿ ನಡೆದಿತ್ತು. ಜಿಲ್ಲಾಧಿಕಾರಿ ಅವರು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ವರದಿ ಸಲ್ಲಿಸಿದ್ದರು.

ಅರ್ಜಿದಾರರ ಪರ ಹಿರಿಯ ವಕೀಲ ಸಂಜಯ್ ಎಂ. ನುಲಿ ಮತ್ತು ಪ್ರತಿವಾದಿ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಫ್ಟಿ, ಎ.ಎನ್.ವೇಣುಗೋಪಾಲ ಗೌಡ, ವಕೀಲರಾದ ಬಾಲಾಜಿ ಶ್ರೀನಿವಾಸನ್, ಕೆ.ವಿ.ಮುತ್ತು ಕುಮಾರ್ ಮತ್ತು ಕರ್ನಾಟಕ ಸರ್ಕಾರದ ಪರ ಹೆಚ್ಚುವರಿ ಅಡ್ವಕೇಟ್ ಜನರಲ್ ನಿಶಾಂತ್ ಪಾಟೀಲ ವಾದ ಮಂಡಿಸಿದ್ದರು.ಪ್ರಾಣೇಶ್ ಅವರ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದ ಮಾಹಿತಿ ದೊರೆತ ಕೂಡಲೇ ಗಾಯತ್ರಿ ಶಾಂತೇಗೌಡ ಅವರ ಬೆಂಬಲಿಗರು ಚಿಕ್ಕಮಗಳೂರಿನಲ್ಲಿ ಸಂಭ್ರಮಾಚರಣೆ ನಡೆಸಿದರು. ಗಾಯತ್ರಿ ಅವರಿಗೆ ಪುಷ್ಪಗುಚ್ಛ ನೀಡಿ, ಹಾರ ಹಾಕಿ ಸಿಹಿ ತಿನ್ನಿಸಿದರು. ನಂತರ ಹನುಮಂತಪ್ಪ ವೃತ್ತಕ್ಕೆ ತೆರಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

2021ರ ಡಿಸೆಂಬರ್‌ನಲ್ಲಿ ನಡೆದಿದ್ದ ಚುನಾವಣೆ

ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನಪರಿಷತ್‌ ಸ್ಥಾನಕ್ಕೆ 2021ರ ಡಿಸೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. ಚಲಾವಣೆಯಾಗಿದ್ದ 2,410 ಮತಗಳ ಪೈಕಿ 39 ಮತಗಳು ಅಸಿಂಧುವಾಗಿದ್ದವು. ಪ್ರಾಣೇಶ್ 1,188 ಮತಗಳನ್ನು ಪಡೆದಿದ್ದರು. ಗಾಯತ್ರಿ ಶಾಂತೇಗೌಡ ಅವರು 1,182 ಮತಗಳನ್ನ ಗಳಿಸಿದ್ದರು. ಪ್ರಾಣೇಶ್ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.’ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ ಪಟ್ಟಣ ಪಂಚಾಯಿತಿಗಳ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಅವರಿಗೆ ಮತದಾನ ಮಾಡಲು ಅವಕಾಶ ಇಲ್ಲ’ ಎಂದು ಗಾಯತ್ರಿ ಶಾಂತೇಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು.

[t4b-ticker]
error: Content is protected !!