ಚಿಕ್ಕಬಳ್ಳಾಪುರ: ಬರದ ಹಿನ್ನೆಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರಿಗಾಗಿ ₹1 ಕೋಟಿ ನೀಡಲಾಗುವುದು ಎಂದು ಕಂದಾಯ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಬರ ಪರಿಸ್ಥಿತಿ ಕುರಿತು ಸಭೆ ನಡೆಸಿದರು.ಪಕ್ಷಾತೀತವಾಗಿ ಎಲ್ಲ ಶಾಸಕರ ಕ್ಷೇತ್ರಕ್ಕೆ ಹಣ ನೀಡಲಾಗುವುದು. ಕುಡಿಯುವ ನೀರಿನ ಸಮಸ್ಯೆ ಆಗಬಾರದು. ಕೊರೆದ ಕೊಳವೆ ಬಾವಿಗೆ ತಕ್ಷಣವೇ ಪಂಪ್ ಮೋಟರ್ ಒದಗಿಸಬೇಕು. ಬೆಸ್ಕಾಂನವರು ವಿದ್ಯುತ್ ಸಂಪರ್ಕ ನೀಡಬೇಕು ಎಂದು ಸೂಚಿಸಿದರು.ನೀರು ಲಭ್ಯವಿರುವ 24 ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸದಿರುವುದಕ್ಕೆ ಬೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಜಿಲ್ಲೆಯ ಎಂಟು ತಾಲ್ಲೂಕುಗಳಲ್ಲಿ ಆರು ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ ಇದೆ ಎಂದು ಜಿಲ್ಲೆಯಲ್ಲಿನ ಮಳೆ, ಬಿತ್ತನೆ, ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿ ಪ್ರಭು ವಿವರಿಸಿದರು.80 ಸಾವಿರ ರೈತರಿಗೆ ಬೆಳೆ ವಿಮೆ ಮಾಡಿಸಬೇಕು ಎಂದು ಗುರಿ ನೀಡಲಾಗಿದೆ. ಆದರೆ ಇಲ್ಲಿಯವರೆಗೆ 20 ಸಾವಿರ ರೈತರ ಬೆಳೆ ವಿಮೆ ಮಾಡಿಸಿರುವುದಕ್ಕೆ ಕೃಷಿ ಇಲಾಖೆ ಅಧಿಕಾರಿಗಳನ್ನು ಉಪಮುಖ್ಯಮಂತ್ರಿ ತರಾಟೆಗೆ ತೆಗೆದುಕೊಂಡರು.ಶಾಸಕರಾದ ಪ್ರದೀಪ್ ಈಶ್ವರ್, ಕೆ.ಎಚ್.ಪುಟ್ಟಸ್ವಾಮಿಗೌಡ, ಬಿ.ಎನ್.ರವಿಕುಮಾರ್ ತಮ್ಮ ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ವಿವರಿಸಿದರು.










































