ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಹಲವು ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಅನೇಕ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದು, ಉತ್ತರ ಒಳನಾಡಿನ ಕೆಲವೆಡೆ ಸಹ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಉಡುಪಿ ಜಿಲ್ಲೆಯ ಕೊಲ್ಲೂರು (9 ಸೆಂ.ಮೀ.), ಕೊಡಗು ಜಿಲ್ಲೆಯ ಭಾಗಮಂಡಲ (7 ಸೆಂ.ಮೀ.) ಹಾಗೂ ಶಿವಮೊಗ್ಗ ಜಿಲ್ಲೆಯ ಆಗುಂಬೆ (7 ಸೆಂ.ಮೀ.) ರಾಜ್ಯದಲ್ಲೇ ಅತಿ ಹೆಚ್ಚು ಮಳೆಯಾದ ಪ್ರದೇಶಗಳಾಗಿವೆ. ಶೃಂಗೇರಿ, ವಿರಾಜಪೇಟೆ, ಸೋಮವಾರಪೇಟೆ ಹಾಗೂ ಔರಾದ್ ಸೇರಿದಂತೆ ಹಲವು ಕಡೆಗಳಲ್ಲಿ 6 ಸೆಂ.ಮೀ.ವರೆಗೆ ಮಳೆಯಾಗಿದೆ. ಧರ್ಮಸ್ಥಳ, ಬೆಳ್ತಂಗಡಿ, ಜೋಯಿಡಾ, ತಾಳಗುಪ್ಪ ಸೇರಿದಂತೆ ಅನೇಕ ಪ್ರದೇಶಗಳಲ್ಲೂ ಉತ್ತಮ ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.ಜುಲೈ 31 ಮತ್ತು ಆಗಸ್ಟ್ 1ರಂದು ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಭಾರಿ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಲ್ಲುವುದು, ಮರಗಳು ಉರುಳುವುದು, ವಿದ್ಯುತ್ ವ್ಯತ್ಯಯ, ತಗ್ಗು ಪ್ರದೇಶಗಳಲ್ಲಿ ಪ್ರವಾಹ, ಕರಾವಳಿ ಮತ್ತು ಘಾಟ್ ಪ್ರದೇಶಗಳಲ್ಲಿ ಭೂಕುಸಿತದ ಅಪಾಯ ಹೆಚ್ಚುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ.
ಜುಲೈ 31ರಿಂದ ಆಗಸ್ಟ್ 2ರವರೆಗೆ ಕರ್ನಾಟಕದ ಕರಾವಳಿ ಸಮುದ್ರ ಪ್ರದೇಶದಲ್ಲಿ ಗಂಟೆಗೆ 40-50 ಕಿ.ಮೀ. ವೇಗದ ಬಿರುಸಿನ ಗಾಳಿ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.ಮುಂದಿನ 7 ದಿನಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿಯೂ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.










































