ಎಸ್.ಎಸ್.ಮಲ್ಲಿಕಾರ್ಜುನ್‌ಗೆ ಮತ್ತೆ ಒಲಿದ ಸಚಿವ ಸ್ಥಾನ

Picture of Savistara

Savistara

Bureau Report

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮತ್ತೆ ಸಚಿವ ಸ್ಥಾನ ಒಲಿದಿದೆ.

ಹೈಕಮಾಂಡ್‌ ಬಿಡುಗಡೆ ಮಾಡಿದ ಸಚಿವರ ಪಟ್ಟಿಯಲ್ಲಿ ಮಾಜಿ ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್ ಅವರ ಹೆಸರು ಇರಲಿಲ್ಲ. ಆ ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಭಟ್ಕಳ- ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಕೈಬಿಟ್ಟು, ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮಂತ್ರಿ ಪಟ್ಟ ನೀಡಲಾಗಿದೆ.ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ದಿ. ಶಾಮನೂರು ಶಿವಶಂಕರಪ್ಪ ಅವರ ಪುತ್ರರಾಗಿರುವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಜಿಲ್ಲೆಯಲ್ಲಿ ಅತ್ಯಂತ ಪ್ರಭಾವಿ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ.’ಮೊದಲ ಪಟ್ಟಿ ಬಿಡುಗಡೆ ಬಳಿಕ ಎಸ್.ಎಸ್.ಮಲ್ಲಿಕಾರ್ಜುನ್ ಅವರು ರಾಜ್ಯಮಟ್ಟದ ನಾಯಕರು ಹಾಗೂ ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರಿ ತಮ್ಮ ಹೆಸರನ್ನು ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ’ ಎಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿಬರುತ್ತಿವೆ. ಆದರೆ, ‘ಟೈಪ್ ಮಾಡುವಾಗ ಸಣ್ಣದೋಷ ಉಂಟಾಗಿದ್ದರಿಂದ ಮೊದಲ ಪಟ್ಟಿಯಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹೆಸರು ಇರಲಿಲ್ಲ. ಬಳಿಕ ಪಟ್ಟಿಯನ್ನು ಸರಿಪಡಿಸಿ ಬಿಡುಗಡೆ ಮಾಡಲಾಗಿದೆ’ ಎಂದು ಎಸ್.ಎಸ್.ಮಲ್ಲಿಕಾರ್ಜುನ್ ಅವರ ಆಪ್ತ ಮೂಲಗಳು ತಿಳಿಸಿವೆ.

1999ರಲ್ಲಿ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವಧಿಯಲ್ಲಿ ಸಚಿವರಾಗಿ ಕೆಲಸ ಮಾಡಿದ್ದರು.ಆ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ 2016ರಿಂದ 2018ರ ವರೆಗೆ ಸಚಿವರಾಗಿದ್ದರು. 2023ರ ಚುನಾವಣೆಯ ಬಳಿಕ ಸಿದ್ದರಾಮಯ್ಯ ಅವರ ಸರ್ಕಾರದಲ್ಲೂ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಮತ್ತೆ ಸಚಿವ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮೊದಲ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಳ್ಳದಿದ್ದಾಗ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅಚ್ಚರಿ ವ್ಯಕ್ತಪಡಿಸಿದ್ದರು.

ಜಿಲ್ಲೆಗೆ ಎರಡು ಸಚಿವ ಸ್ಥಾನ:

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಜಿಲ್ಲೆಯ ಇಬ್ಬರು ಶಾಸಕರು ಸಚಿವ ಸ್ಥಾನ ಅಲಂಕರಿಸುತ್ತಿದ್ದಾರೆ. ಈಗಾಗಲೇ 3 ಬಾರಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಎಸ್.ಎಸ್.ಮಲ್ಲಿಕಾರ್ಜುನ್ ಅವರು 4ನೇ ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿದ್ದಾರೆ. ಇನ್ನು ಮಾಯಕೊಂಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕೆ.ಎಸ್‌.ಬಸವಂತಪ್ಪ ಅವರಿಗೂ ಈ ಬಾರಿ ಸಂಪುಟದಲ್ಲಿ ಅವಕಾಶ ದೊರೆತಿದೆ.

[t4b-ticker]
error: Content is protected !!