ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ?; ದೂರುಗಳ ಬಗ್ಗೆ ತನಿಖೆ: ಸಚಿವ ಖಾದರ್

Picture of Savistara

Savistara

Bureau Report

ಆನ್‌ಲೈನ್ ವೇದಿಕೆಗಳ ಮೂಲಕ ಮಾರಾಟವಾಗುವ ತರಕಾರಿಗಳು ತಾಜಾವಾಗಿ ಹಾಗೂ ಆಕರ್ಷಕವಾಗಿ ಕಾಣುವಂತೆ ಮಾಡಲು ಅಪಾಯಕಾರಿ ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಹಕರ ಆರೋಗ್ಯದ ದೃಷ್ಟಿಯಿಂದ ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು. ತರಕಾರಿಗಳಿಗೆ ರಾಸಾಯನಿಕ ಸಿಂಪಡಣೆ ಮಾಡುತ್ತಿರುವ ಕುರಿತು ಬಂದಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ, ಅಗತ್ಯವಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಹೋಟೆಲ್‌ಗಳ ಸುರಕ್ಷತೆಗೂ ವಿಶೇಷ ಗಮನ

ಇತ್ತೀಚೆಗೆ ರಾಜ್ಯದ ವಿವಿಧ ಹೋಟೆಲ್‌ಗಳು ಮತ್ತು ಕ್ಲಬ್‌ಗಳ ಮೇಲೆ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಆಹಾರ ತಯಾರಿಕೆ, ಸುರಕ್ಷತೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಹೊಸ ಕ್ರಮಗಳನ್ನು ರೂಪಿಸಲಾಗುತ್ತಿದೆ.

ಮುಂದಿನ ಒಂದು ವಾರ ಅಥವಾ 15 ದಿನಗಳೊಳಗೆ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್‌ಗಳ ಪ್ರತಿನಿಧಿಗಳು ಹಾಗೂ ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಂದಿಗೆ ವಿಶೇಷ ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಔಷಧ ಮಾಫಿಯಾ ಪ್ರಕರಣದ ತನಿಖೆ ಪ್ರಗತಿಯಲ್ಲಿ

ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಔಷಧ ಮಾಫಿಯಾ ಪ್ರಕರಣದ CID ತನಿಖೆ ಕುರಿತು ಮಾಹಿತಿ ನೀಡಿದ ಖಾದರ್, ಪ್ರಕರಣದ ಪ್ರಮುಖ ರೂವಾರಿ ಈಗಾಗಲೇ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿಸಿದ್ದಾರೆ.ತನಿಖೆಯಲ್ಲಿ ನಕಲಿ ಅಥವಾ ಕಳಪೆ ಗುಣಮಟ್ಟದ ಔಷಧಗಳು ಕೆಲವು ಪ್ರಮುಖ ಖಾಸಗಿ ಆಸ್ಪತ್ರೆಗಳಿಗೆ ಪೂರೈಕೆಯಾಗಿರುವುದು ಬೆಳಕಿಗೆ ಬಂದಿದೆ. ಆದರೆ ಸರ್ಕಾರಿ ಆಸ್ಪತ್ರೆಗಳಿಗೆ ಇಂತಹ ಔಷಧಗಳು ಪೂರೈಕೆಯಾಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.ತನಿಖಾ ತಂಡವು ಶೀಘ್ರದಲ್ಲೇ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆಯನ್ನು ಹೊರತರಲಿದೆ ಎಂದು ಅವರು ಹೇಳಿದ್ದಾರೆ.

ದತ್ತೂರ ಬೀಜ ಮಾರಾಟ; 2,100 ಬೀಜ ವಶ

ಅಪಾಯಕಾರಿ ದತ್ತೂರ ಬೀಜಗಳನ್ನು ನಿಯಮಬಾಹಿರವಾಗಿ ಮಾರಾಟ ಮಾಡುತ್ತಿದ್ದ ಮೂರು ಇ-ಕಾಮರ್ಸ್ ಜಾಲತಾಣಗಳ ಆಹಾರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.ಪರಿಶೀಲನೆ ವೇಳೆ 2,100 ದತ್ತೂರ ಬೀಜಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಷಕಾರಿ ವಸ್ತುವಾಗಿರುವ ದತ್ತೂರ ಬೀಜಗಳ ಮಾರಾಟದ ಬಗ್ಗೆ ಸ್ಥಳೀಯ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ FSSAI ಸಿಇಒಗೆ ಪತ್ರ ಬರೆಯಲಾಗಿದೆ ಎಂದು ಖಾದರ್ ತಿಳಿಸಿದ್ದಾರೆ.ಆಹಾರ ಸುರಕ್ಷತೆ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆನ್‌ಲೈನ್ ಆಹಾರ ಮಾರಾಟದಿಂದ ಹಿಡಿದು ಹೋಟೆಲ್‌ಗಳು ಮತ್ತು ಇ-ಕಾಮರ್ಸ್ ವೇದಿಕೆಗಳವರೆಗೆ ಕಟ್ಟುನಿಟ್ಟಿನ ತಪಾಸಣೆ ನಡೆಸಲು ಇಲಾಖೆ ಮುಂದಾಗಿದೆ.

[t4b-ticker]
error: Content is protected !!