ಬೆಂಗಳೂರು: ‘ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು’ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದರು.
‘ಎಂಟು ತಿಂಗಳಲ್ಲಿ ಕೇಂದ್ರ ಸರ್ಕಾರ ತೈಲೋತ್ಪನ್ನ ದರಗಳನ್ನು ಹಲವು ಬಾರಿ ಹೆಚ್ಚಳ ಮಾಡಿದೆ. ನಾವು ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ ನಮ್ಮ ನಾಲ್ಕೂ ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗುತ್ತಿದೆ’ ಎಂದು ಮಾಹಿತಿ ನೀಡಿದರು.’ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಧ್ಯಯನ ನಡೆಸುತ್ತಿದೆ. ಸದ್ಯದಲ್ಲೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಬರ ಪರಿಸ್ಥಿತಿಯಲ್ಲಿ ಜನಸಾಮಾನ್ಯರಿಗೆ ಹೆಚ್ಚು ಹೊರೆಯಾಗದ ರೀತಿಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ದರ ಪರಿಷ್ಕರಣೆ ಮಾಡಲಾಗುವುದು’ ಎಂದರು.’ಇದರಿಂದ ಆಗುವ ಹೊರೆಯನ್ನು ಸರಿದೂಗಿಸಲು ಸರ್ಕಾರದಿಂದ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಅದರಂತೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಲಾಗುವುದು’ ಎಂದು ಸಚಿವರು ತಿಳಿಸಿದರು.
‘ಶಕ್ತಿ’ ಯೋಜನೆಯಡಿಯಲ್ಲಿ ರಾಜ್ಯದ ಒಂದು ಕೋಟಿಗೂ ಅಧಿಕ ಮಹಿಳೆಯರಿಗೆ ಮೊದಲ ಹಂತದಲ್ಲಿ ಉಚಿತ ಸ್ಮಾರ್ಟ್‌ಕಾರ್ಡ್‌ಗಳನ್ನು ವಿತರಿಸಲಾಗುವುದು. ಇದಕ್ಕೆ ₹ 250 ಕೋಟಿ ವೆಚ್ಚವಾಗಲಿದ್ದು, ಸದ್ಯದಲ್ಲೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು’ ಎಂದು ಮಾಹಿತಿ ನೀಡಿದರು.

















































