ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ನಾಗರಾಧನೆಯ ಪವಿತ್ರ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ 600 ಕೋಟಿ ರೂಪಾಯಿ ವೆಚ್ಚದ ಮಾಸ್ಟರ್ ಪ್ಲಾನ್ ಅಭಿವೃದ್ಧಿ ಕಾಮಗಾರಿಗಳು ನಿಧಾನಗೊಂಡಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ ಅವರು ಮುಜರಾಯಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದ ಆಡಳಿತ ಸಭಾಂಗಣದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಮರ್ಪಕ ಉತ್ತರ ನೀಡಲು ವಿಫಲರಾದ ಅಧಿಕಾರಿಗಳನ್ನು ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
600 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ತೊಡಕಾಗಿರುವ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ವಿಚಾರಗಳಿಗೆ ವೇಗ ನೀಡಿ ಕೂಡಲೇ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಆದೇಶಿಸಿದರು. ಅಲ್ಲದೆ, ನೋಟಿಸ್ ನೀಡಲಾದ ವಾಣಿಜ್ಯ ಕಟ್ಟಡಗಳನ್ನು ಕೂಡಲೇ ತೆರವುಗೊಳಿಸುವಂತೆ (Demolish) ಖಡಕ್ ಸೂಚನೆ ನೀಡಿದರು.
ತಿರುಪತಿ ಮಾದರಿಯಲ್ಲಿ ಸೌಲಭ್ಯಗಳಿಗೆ ಸೂಚನೆ:ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ತಿರುಪತಿ ಮಾದರಿಯಲ್ಲಿ ಸರತಿ ಸಾಲಿನ ವ್ಯವಸ್ಥೆ, ದೇವರ ದರ್ಶನ, ಪ್ರಸಾದ ಸ್ವೀಕಾರ, ಭೋಜನ ಪ್ರಸಾದ, ವಸತಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಕುಕ್ಕೆ ಕ್ಷೇತ್ರಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಮೂಲಸೌಕರ್ಯಗಳ ಕೊರತೆಯಾಗದಂತೆ ನಿಗಾ ವಹಿಸುವುದಾಗಿ ಅವರು ತಿಳಿಸಿದರು.
ಸಭೆಯಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರು, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರು, ಕಾರ್ಯನಿರ್ವಹಣಾಧಿಕಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
















































