ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ನಕಲಿ ಹಾಗೂ ದುರುದ್ದೇಶಪೂರಿತ ವಿಡಿಯೋಗಳನ್ನು ಹರಡಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ ದೂರಿನ ಆಧಾರದ ಮೇಲೆ ಸಿಸಿಬಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ನಿರ್ದೇಶನದಂತೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು, ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ತಮ್ಮ ವಿರುದ್ಧ ರಾಜಕೀಯ ಸಂಚು ರೂಪಿಸಿ, ಮಾನಹಾನಿ ಮಾಡುವ ಉದ್ದೇಶದಿಂದ ಸುಳ್ಳು ಮಾಹಿತಿಯನ್ನು ಹರಡಲಾಗುತ್ತಿದೆ ಎಂದು ಆರೋಪಿಸಿರುವ ಸಿದ್ದರಾಮಯ್ಯ ಅವರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ನೇರವಾಗಿ ದೂರು ಸಲ್ಲಿಸಿದ್ದರು. ಈ ದೂರಿನ ಜೊತೆಗೆ ತಪ್ಪು ಮಾಹಿತಿಯನ್ನು ಪ್ರಸಾರ ಮಾಡುತ್ತಿದ್ದ ನಿರ್ದಿಷ್ಟ ಸಾಮಾಜಿಕ ಜಾಲತಾಣ ಖಾತೆಗಳ (ID) ವಿವರಗಳನ್ನೂ ನೀಡಿದ್ದರು.
ದೂರು ದಾಖಲಾದ ಬಳಿಕ ಸೈಬರ್ ಕ್ರೈಮ್ ಪೊಲೀಸರು ಸಾಮಾಜಿಕ ಜಾಲತಾಣಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಿದ್ದಾರೆ. ವಿಡಿಯೋಗಳನ್ನು ಹಂಚಿಕೊಂಡ ಪ್ರಮುಖ ಖಾತೆಗಳ ಐಪಿ (IP) ವಿಳಾಸಗಳನ್ನು ಪರಿಶೀಲಿಸುವ ಮೂಲಕ ಅವುಗಳಿಗೆ ಸಂಬಂಧಿಸಿದ ಸಾಧನಗಳ ಮಾಲೀಕರನ್ನು ಗುರುತಿಸುವ ಪ್ರಯತ್ನ ನಡೆಸಿದ್ದಾರೆ. ಈ ಕಾರ್ಯಾಚರಣೆಯ ಭಾಗವಾಗಿ ಇಬ್ಬರು ಶಂಕಿತ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕೃತ್ಯದ ಹಿಂದೆ ಯಾರಿದ್ದಾರೆ ಮತ್ತು ವಿಡಿಯೋವನ್ನು ಯಾವ ಮೂಲದಿಂದ ಸಿದ್ಧಪಡಿಸಲಾಗಿದೆ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.











































