ಹಾಸನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ನಾವು ಯಾವತ್ತೂ ಯಾವುದೇ ಅನಧಿಕೃತ ಅಥವಾ ಅಕ್ರಮ ಕೆಲಸಗಳನ್ನು ಮಾಡಿಲ್ಲ. ನಮ್ಮ ಪಿಎ ಅಥವಾ ಅವರ ಸೆಕ್ಷನ್ನಿಂದ ತಪ್ಪು ಸಂದೇಶ ರವಾನೆಯಾಗಿದ್ದರೆ ಖಂಡಿತಾ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.


ಸುಳ್ಳು ಹಾಗೂ ಆಧಾರರಹಿತ ಮಾಹಿತಿಯನ್ನು ಜನರಿಗೆ ನೀಡುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ನಾನು ಯಾವುದೇ ತಪ್ಪು ಮಾಡಿಲ್ಲ, ಮಾಡುತ್ತಿಲ್ಲ ಹಾಗೂ ಮುಂದೆಯೂ ಮಾಡುವುದಿಲ್ಲ. ಈ ಸಂದೇಶವನ್ನು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಇಂತಹ ಮಾಹಿತಿಯನ್ನು ಯಾರೂ ನಂಬಬಾರದು ಎಂದು ಮನವಿ ಮಾಡಿದ್ದಾರೆ.ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಯಾರು ತಪ್ಪಿತಸ್ಥರಿದ್ದಾರೋ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಸೈಬರ್ ಪೊಲೀಸರಿಗೆ ದೂರು ನೀಡಿ, ಎಫ್ಐಆರ್ ದಾಖಲಿಸಲು ಕ್ರಮ ಕೈಗೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.


ಸುಳ್ಳು ಮಾಹಿತಿಯನ್ನು ಹರಡುವ ಮೂಲಕ ವ್ಯಕ್ತಿಯ ತೇಜೋವಧೆ ಮಾಡುವುದು, ಅವರನ್ನು ದುರ್ಬಲರನ್ನಾಗಿಸುವುದು ಹಾಗೂ ಗುರಿಯಾಗಿಸಿಕೊಂಡು ತಲೆತಗ್ಗಿಸುವಂತೆ ಮಾಡುವುದು ಅಕ್ಷಮ್ಯ ಅಪರಾಧ. ಈ ಪ್ರಕರಣದಲ್ಲಿ ಸತ್ಯಾಸತ್ಯತೆ ಹೊರಬರಬೇಕು. ಪೊಲೀಸರಿಗೆ ದೂರು ನೀಡುವ ಮೂಲಕ ಸತ್ಯವನ್ನು ಬಯಲಿಗೆಳೆಯುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಆಪ್ತ ಸಹಾಯಕರ (ಪಿಎ) ವಾಟ್ಸಾಪ್ನಲ್ಲಿ ನಮ್ಮ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಮಾಹಿತಿಗಳನ್ನು ಹರಡಲಾಗುತ್ತಿದೆ. ಆದರೆ, ನಾವು ಯಾವುದೇ ರೀತಿಯ ಅನಧಿಕೃತ ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಿಲ್ಲ. ಈ ಸಂಬಂಧ ಸಮಗ್ರ ತನಿಖೆ ನಡೆಸಿ, ಸತ್ಯಾಸತ್ಯತೆಯನ್ನು ಬಹಿರಂಗಪಡಿಸುವಂತೆ ಸೈಬರ್ ಕ್ರೈಂ ವಿಭಾಗಕ್ಕೆ ಅಧಿಕೃತವಾಗಿ ದೂರು ಸಲ್ಲಿಸಲಾಗಿದ್ದು, FIR ಕೂಡ ದಾಖಲಿಸಲಾಗಿದೆ. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆಯ ಮೂಲಕ ಸತ್ಯಾಂಶ ಹೊರಬಂದು, ಸುಳ್ಳು ಹಾಗೂ ಆಧಾರರಹಿತ ಮಾಹಿತಿಗಳನ್ನು ಹರಡಿರುವ ತಪ್ಪಿತಸ್ಥರ ವಿರುದ್ಧ ಕಾನೂನು ರೀತಿ ಸೂಕ್ತ ಕ್ರಮ ಜರುಗಿಸಬೇಕು ಎಂಬುದೇ ನಮ್ಮ ಆಶಯವಾಗಿದೆ ಎಂದು ಡಿಸಿ ಲತಾ ಕುಮಾರಿ ತಮ್ಮ ಅಧಿಕೃತ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ಕುಮಾರಸ್ವಾಮಿ ಆರೋಪವೇನು?: ಹಾಸನದಲ್ಲಿ ವರ್ಗಾವಣೆ ತಡೆಗೆ 75 ಲಕ್ಷ ರೂ. ಹಣದ ವ್ಯವಹಾರ ನಡೆದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭಾನುವಾರ ಗಂಭೀರ ಆರೋಪ ಮಾಡಿದ್ದರು.
ಹಾಸನಾಂಬೆ ದೇವಿಯ ದರ್ಶನ ಪಡೆದ ಬಳಿಕ ಹಾಸನ ಶಾಸಕ ಸ್ವರೂಪ್ ಪ್ರಕಾಶ್ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಹಾಸನ ಜಿಲ್ಲಾಧಿಕಾರಿ ಅವರ ವರ್ಗಾವಣೆ ವಿಚಾರವನ್ನು ಪ್ರಸ್ತಾಪಿಸಿದ್ದರು. ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರ ವಾಟ್ಸಾಪ್ ಸಂಭಾಷಣೆಯನ್ನು ಉಲ್ಲೇಖಿಸಿ, ವರ್ಗಾವಣೆ ತಡೆಗೆ 75 ರೂ ಲಕ್ಷ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಭಾಷಣೆಯಲ್ಲಿ ಸುಳಿವುಗಳಿವೆ. ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಹಣದ ವ್ಯವಹಾರ ನಡೆದಿದೆಯೇ ಎಂಬುದರ ಬಗ್ಗೆ ತನಿಖೆಯಾಗಬೇಕೆಂಬ ರೀತಿಯಲ್ಲಿ ತಮ್ಮ ಆರೋಪಗಳನ್ನು ಮಾಡಿದ್ದರು.








































