ಉಡುಪಿ, ನ. 22 : ನವೆಂಬರ್ 24 ರಂದು ಉಡುಪಿಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ಊಟೋಪಚಾರ ಹಾಗೂ ಇತರ ವ್ಯವಸ್ಥೆಗಳಿಗಾಗಿ ಗ್ರಾಮ ಪಂಚಾಯಿತಿಗಳ ಸ್ವಂತ ನಿಧಿಯನ್ನು ಬಳಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೊರಡಿಸಿರುವ ಆದೇಶಕ್ಕೆ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ನಗರದ ಪತ್ರಿಕಾ ಭವನದಲ್ಲಿ ಶನಿವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು, ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದರು.

ನ. 17 ರಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಜಿಲ್ಲೆಯ ಎಲ್ಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದು, ಸಮಾವೇಶಕ್ಕೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಕನಿಷ್ಠ 50 ಮಂದಿ ಫಲಾನುಭವಿಗಳನ್ನು ಕರೆತರುವುದರ ಜೊತೆಗೆ, ಅವರ ಊಟೋಪಚಾರದ ವೆಚ್ಚವನ್ನು ಆಯಾ ಗ್ರಾಮ ಪಂಚಾಯಿತಿಗಳ ಸ್ವಂತ ನಿಧಿಯಿಂದ ಗರಿಷ್ಠ 25 ಸಾವಿರ ರೂ. ಮಿತಿಯಲ್ಲಿ ಭರಿಸುವಂತೆ ಸೂಚಿಸಿದ್ದಾರೆ ಎಂದು ಶಾಸಕರು ತಿಳಿಸಿದರು.ಜಿಲ್ಲೆಯ ಒಟ್ಟು 155 ಗ್ರಾಮ ಪಂಚಾಯಿತಿಗಳಿಂದ ತಲಾ 25 ಸಾವಿರ ರೂ. ಗಳಂತೆ ಒಟ್ಟು 38.75 ಲಕ್ಷ ರೂ. ಸಂಗ್ರಹವಾಗಲಿದೆ. ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿಗೆ ಮೀಸಲಾದ ಹಣವನ್ನು ರಾಜಕೀಯ ಪ್ರೇರಿತ ಕಾರ್ಯಕ್ರಮಗಳಿಗೆ ಬಳಸುವುದು ಸರಿಯಲ್ಲ ಎಂದು ಸುನೀಲ್ ಕುಮಾರ್ ಹೇಳಿದರು.ಈಗಾಗಲೇ ಅನುದಾನ ಕೊರತೆಯಿಂದ ಹಲವು ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ.


15ನೇ ಹಣಕಾಸು ಯೋಜನೆಯಡಿ ಬಿಡುಗಡೆಯಾಗಬೇಕಾದ ಅನುದಾನವೂ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ. ಕುಡಿಯುವ ನೀರು, ರಸ್ತೆ, ಚರಂಡಿ ನಿರ್ವಹಣೆ, ಬೀದಿ ದೀಪಗಳ ವಿದ್ಯುತ್ ಬಿಲ್, ಸಿಬ್ಬಂದಿ ವೇತನ ಪಾವತಿಗೂ ಪಂಚಾಯಿತಿಗಳು ಪರದಾಡುತ್ತಿವೆ. ಇಂತಹ ಸಂದರ್ಭದಲ್ಲಿ ಸೀಮಿತ ಸ್ವಂತ ನಿಧಿಯನ್ನು ಸಮಾವೇಶದ ಊಟಕ್ಕೆ ಬಳಸಲು ಸೂಚಿಸಿರುವುದು ಜನರ ಮೂಲಭೂತ ಅಗತ್ಯಗಳಿಗೆ ಅನ್ಯಾಯ ಮಾಡಿದಂತಾಗಿದೆ ಎಂದು ಅವರು ಆರೋಪಿಸಿದರು.


ಜನಪ್ರತಿನಿಧಿಗಳೊಂದಿಗೆ ಯಾವುದೇ ಚರ್ಚೆ ನಡೆಸದೆ ಏಕಪಕ್ಷೀಯವಾಗಿ ಆದೇಶ ಹೊರಡಿಸಿರುವುದು ಆಕ್ಷೇಪಾರ್ಹವಾಗಿದೆ. ಸಮಾವೇಶಕ್ಕೆ ತಮ್ಮ ವಿರೋಧವಿಲ್ಲ, ಆದರೆ ಗ್ರಾಮ ಪಂಚಾಯಿತಿ ನಿಧಿ ಬಳಕೆಗೆ ವಿರೋಧವಿದೆ ಎಂದು ಶಾಸಕರು ಸ್ಪಷ್ಟಪಡಿಸಿದರು.


ಈ ಕುರಿತು ಜಿಲ್ಲೆಯ ಐವರು ಶಾಸಕರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಪತ್ರ ಬರೆದು ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. ಆದೇಶ ಹಿಂಪಡೆಯದಿದ್ದರೆ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.















































