
ಮಂಗಳೂರು: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ನಾಳೆ (ನ.30) ಮಂಗಳೂರಿನ ಪ್ರತಿಷ್ಠಿತ ಸೇಂಟ್ ಅಲೋಶಿಯಸ್ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈಗಾಗಲೇ 448ಕ್ಕೂ ಅಧಿಕ ಕಂಪನಿಗಳು ಹಾಗೂ 16,631 ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದಲೇ 7,477 ಹಾಗೂ ಉಡುಪಿ ಜಿಲ್ಲೆಯಿಂದ 1,791 ಅಭ್ಯರ್ಥಿಗಳು ನೋಂದಣಿಯಾಗಿರುವುದು ವಿಶೇಷ.

ಮೇಳದಲ್ಲಿ ಭಾಗವಹಿಸುವ ಕಂಪನಿಗಳು ಸ್ಥಳದಲ್ಲೇ ಪ್ರಾಥಮಿಕ ಸಂದರ್ಶನ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಹುದ್ದೆಗಳಿಗೆ ಅವಕಾಶವಿದೆ ಎಂದು ಇಲಾಖೆ ತಿಳಿಸಿದೆ.

ಅಭ್ಯರ್ಥಿಗಳ ಅನುಕೂಲಕ್ಕಾಗಿ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ, ಮಂಗಳೂರು ರೈಲ್ವೆ ನಿಲ್ದಾಣ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕಾಲೇಜು ಆವರಣಕ್ಕೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಅಭ್ಯರ್ಥಿಗಳು ತಮ್ಮ ಬಯೋಡೇಟಾದ ಹಲವು ಪ್ರತಿಗಳು, ವಿದ್ಯಾರ್ಹತೆ ಪ್ರಮಾಣಪತ್ರಗಳು, ಆಧಾರ್ ಕಾರ್ಡ್ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಮೇಳಕ್ಕೆ ಆಗಮಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.









































